ತುಮಕೂರು: ಜಿಲ್ಲೆಯಲ್ಲಿ ಕರ್ತವ್ಯನಿರತ ಮಹಿಳಾ ಪೊಲೀಸ್ ಸಿಬ್ಬಂದಿಗೆ ಪೂರಕ ವಾತಾವರಣವನ್ನು ಕಲ್ಪಿಸಿಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಕೆ.ವಂಸಿ ಕೃಷ್ಣ ತಿಳಿಸಿದ್ದಾರೆ.
ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಪುರುಷ ಮತ್ತು ಮಹಿಳಾ ಸಿಬ್ಬಂದಿ ಎಂಬ ಯಾವುದೇ ಭೇದಭಾವವಿಲ್ಲದೆ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಪೊಲೀಸ್ ಮಾಹಿತಿ ತಂತ್ರಜ್ಞಾನ ವಿಭಾಗದಿಂದ ಹಿಡಿದು ಬಂದೋಬಸ್ತ್ ನಲ್ಲಿಯೂ ಕೂಡ ಮಹಿಳಾ ಸಿಬ್ಬಂದಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಮತ್ತು ಅವರು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲಿ ಮೂಲಸೌಲಭ್ಯದ ವ್ಯವಸ್ಥೆಯನ್ನು ಕಲ್ಪಿಸಿ ಕೊಡಲಾಗಿದೆ ಎಂದರು.
ತುಮಕೂರು ಜಿಲ್ಲೆಯಲ್ಲಿ 172 ಮಂದಿ ಮಹಿಳಾ ಪೊಲೀಸ್ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರಿಗೆ ಸಾಮಾನ್ಯ ಕಟ್ಟೆಚ್ಚರದ ತರಬೇತಿಯನ್ನು ನೀಡಲಾಗಿದೆ. ಇಲಾಖೆಯಲ್ಲಿ ಯಾವುದೇ ರೀತಿಯ ಕೆಲಸವನ್ನಾದರೂ ಚಾಲೆಂಜಿಂಗ್ ಆಗಿ ತೆಗೆದುಕೊಂಡು ಕೆಲಸದಲ್ಲಿ ನಿರತರಾಗಿದ್ದಾರೆ. ಇನ್ನು ಜಿಲ್ಲೆಗೆ ಹೆಚ್ಚಿನ ಮಹಿಳಾ ಪೊಲೀಸ್ ಸಿಬ್ಬಂದಿ ಅಗತ್ಯತೆ ಇದೆ ಎಂದು ತಿಳಿಸಿದರು.