ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಏಳು ಜನರು ಮೃತಪಟ್ಟಿರುವ ಭೀಕರ ಅಪಘಾತ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ಇತರ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ನಿಶ್ಚಿತಾರ್ಥ ಕಾರ್ಯಕ್ರಮ ಮುಗಿಸಿಕೊಂಡು ಮನಸೂರ ಗ್ರಾಮದಿಂದ ಬೆನಕನಕಟ್ಟಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತರನ್ನು ಅನನ್ಯ (14), ಹರೀಶ (13) ಶಿಲ್ಪಾ (34) ನೀಲವ್ಚ (60) ಮಧುಶ್ರೀ (20) ಮಹೇಶ್ವರಯ್ಯ (11), ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕ್ರೂಸರ್ ವಾಹನದಲ್ಲಿ ಸುಮಾರು 21 ಮಂದಿ ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇದನ್ನೂ ಓದಿ: ಮನೆಗೆ ಆವರಿಸಿದ ಅಡುಗೆ ಅನಿಲದ ಬೆಂಕಿ: ಕುಟುಂಬದ 3 ಮಂದಿ ಸಾವು, ಮಹಿಳೆ ಗಂಭೀರ