ಅಹಮದ್‌ನಗರ(ಮಹಾರಾಷ್ಟ್ರ): ಅಮಹಮದ್‌ನಗರ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಉಂಟಾಗಿದ್ದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ಸುಮಾರು 14 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳು ಹಾಗೂ ಆಸ್ಪತ್ರೆಯಲ್ಲಿದ್ದ ಇತರೆ 20 ಮಂದಿ ರೋಗಿಗಳನ್ನು ಸಮೀಪದ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಗ್ನಿ ಅವಘಡಕ್ಕೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಆಸ್ಪತ್ರೆಯ ಐಸಿಯುನಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ತೀವ್ರ ಆತಂಕ ವ್ಯಕ್ತವಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಗೆ ಆಘಾತ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.