ವಿಲ್ಮಿಂಗ್ಟನ್: ಅಮೆರಿಕಾ ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಂದೇಟು ಹಾಕುತ್ತಿದ್ದಾರೆ. ಈ ಮಧ್ಯೆಯೂ ಚುನಾಯಿತ ಅಧ್ಯಕ್ಷ ಜೋ ಬೈಡನ್ ಅಭಿವೃದ್ಧಿ ಕೆಲಸಗಳನ್ನು ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಅಲ್ಲದೆ, ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯ ಈ ನಡೆ ತುಂಬಾ ಅಪಾಯಕಾರಿ ಎಂದು ಡೆಮಾಕ್ರಟಿಕ್ ಪಕ್ಷ ಎಚ್ಚರಿಸಿದೆ. ರಿಪಬ್ಲಿಕನ್ನರು ಟ್ರಂಪ್ ಅವರ ಆಧಾರ ರಹಿತ ಆರೋಪಗಳನ್ನು ಬೆಂಬಲಿಸುತ್ತಿವೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಡೆಮಾಕ್ರಟಿಕ್ ಪಾರ್ಟಿ ಹೇಳಿದೆ.
ಬೈಡನ್ ಮಾತನಾಡಿ, ದೇಶದಲ್ಲಿ ವ್ಯಾಪಕವಾಗಿ ಕೋವಿಡ್ ಹರಡುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಆರ್ಥಿಕತೆಗೆ ಭಾರಿ ಹೊಡೆತ ಬಿದ್ದಿದ್ದು, ಇದು ರಾಷ್ಟ್ರದ ರಾಜಕೀಯ ಮತ್ತು ಸಾಂಸ್ಕೃತಿಕ ವಿಭಜನೆಗೆ ಕಾರಣವಾಗುತ್ತದೆ. ಸೋಂಕು ನಿಗ್ರಹಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಎಂದಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೈಡನ್‌ಗೆ ಶುಭಾಶಯ ತಿಳಿಸಿದರು.
ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್ ಮತ್ತು ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಬೈಡನ್ ಅವರನ್ನು ಅಭಿನಂದಿಸಿದರು. ಉಭಯ ದೇಶಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಅವರೊಂದಿಗೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ. ಪ್ರಜಾಪ್ರಭುತ್ವವನ್ನು ಉತ್ತೇಜಿಸುವುದರ ಜತೆಗೆ ಸಾಂಕ್ರಾಮಿಕ ರೋಗ ನಿರ್ಮೂಲನೆಗೆ ಒಟ್ಟಾಗಿ ಹೋರಾಡುತ್ತೇವೆ ಎಂದು ಜಾನ್ಸನ್ ತಮ್ಮ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ರಿಪಬ್ಲಿಕನ್ನರು ಚುನಾವಣಾ ಫಲಿತಾಂಶವನ್ನು ಸಾರ್ವಜನಿಕವಾಗಿ ಸ್ವೀಕರಿಸಲು ಹಿಂದೇಟು ಹಾಕುತ್ತಿದ್ದು, ಡಿಸೆಂಬರ್ವರೆಗೆ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ರಿಪಬ್ಲಿಕನ್ ಪಕ್ಷದ ಈ ನಡೆ 2000 ಇಸವಿಯಲ್ಲಿ ಉಂಟಾಗಿದ್ದ ಸಮಸ್ಯೆಯೇ ಪುನರಾವರ್ತನೆಗೊಳಿಸುತ್ತಿದೆ ಎಂದು ಜಾರ್ಜ್ ಡಬ್ಲ್ಯೂ ಬುಷ್ ಸಂಸ್ಥೆ ಆಡಳಿತಾಧಿಕಾರಿಗಳು ಎಚ್ಚರಿಸಿದ್ದಾರೆ.