ಮಿನ್ನಿಯಾಪೊಲೀಸ್: ಅಮೆರಿಕದ ಮೂರು ನಗರಗಳಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಜನ ಸಮೂಹದ ಮೇಲೆ ಗುಂಡಿನ ದಾಳಿ ನಡೆದಿದ್ದು, ಅನೇಕರು ಗಾಯಗೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.
ಭಾನುವಾರ ರಾತ್ರಿ 12.30 ರಿಂದ ಬೆಳಗ್ಗೆ 4 ಗಂಟೆಗೆ ಮಿನ್ನಿಯಾಪೊಲೀಸ್ ನಗರದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಪೊಲೀಸರು ಗಾಯಾಳಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಟೆಕ್ಸಾಸ್ ರಾಜಧಾನಿ ಆಸ್ಟಿನ್ನಲ್ಲಿ ಮಧ್ಯರಾತ್ರಿ 3 ಗಂಟೆಗೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ತಡರಾತ್ರಿ ನ್ಯೂಯಾರ್ಕ್ನ ಸೈರಕೂಸ್ ನಗರದಲ್ಲಿ ಸಮಾರಂಭವೊಂದರಲ್ಲಿ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ 9 ಜನ ಗಾಯಗೊಂಡಿದ್ದು, 17 ವರ್ಷದ ಬಾಲಕ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಈ ಸಮಾರಂಭಕ್ಕೆ ಯಾವುದೇ ರೀತಿಯ ಅನುಮತಿ ನೀಡರಲಿಲ್ಲ ಎಂದು ಮೇಯರ್ ಬೆನ್ ವಾಲ್ಷ್ ಹೇಳಿದ್ದಾರೆ.
ಈ ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.