ಪ್ಯಾರಿಸ್ : ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ರೋಗ ಲಕ್ಷಣಗಳು ಕಾಣಿಸಿಕೊಂಡ ನಂತರ ಮ್ಯಾಕ್ರನ್ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಅವರಿಗೆ ಪಾಸಿಟಿವ್ ಬಂದಿದೆ. ಸೋಂಕು ದೃಢಪಟ್ಟ ಹಿನ್ನೆಲೆ ಏಳು ದಿನಗಳವರೆಗೆ ಅವರು ಐಸೋಲೇಟ್ ಆಗಲಿದ್ದು, ಅಲ್ಲಿಂದಲೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಎಲಿಸೀ ಪ್ಯಾಲೇಸ್ ಹೇಳಿಕೆಯಲ್ಲಿ ತಿಳಿಸಿದೆ.
ಕೋವಿಡ್ ಪ್ರಕರಣಗಳು ಉಲ್ಬಣಗೊಂಡ ಹಿನ್ನೆಲೆ ಫ್ರಾನ್ಸ್ ಸರ್ಕಾರ ಈ ವಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ. ಕೋವಿಡ್ ಪ್ರಾರಂಭವಾದಾಗಿನಿಂದ ಇದುವರೆಗೆ ದೇಶದಲ್ಲಿ ಒಟ್ಟು 2 ಮಿಲಿಯನ್ ಜನರು ಸೋಂಕಿಗೆ ತುತ್ತಾಗಿದ್ದಾರೆ.
ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಅಂಕಿಅಂಶದ ಪ್ರಕಾರ, ಇದುವರೆಗೆ ದೇಶದಲ್ಲಿ 59,400 ಜನರು ಸೋಂಕಿಗೆ ಬಲಿಯಾಗಿದ್ದಾರೆ.