ಅಂಕಾರಾ(ಟರ್ಕಿ): ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅವರ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಗುರುವಾರ ಟರ್ಕಿಯಲ್ಲಿ ಭೇಟಿಯಾಗಲಿದ್ದಾರೆ ಎಂದು ರಷ್ಯಾದ ವಿದೇಶಾಂಗ ಸಚಿವಾಲಯ ಬುಧವಾರ ಸ್ಪಷ್ಟನೆ ನೀಡಿದೆ.
ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ಸಭೆಯನ್ನು ಇದಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಲಾವ್ರೊವ್ ಅವರು ಅಂಟಲ್ಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ರಾಜತಾಂತ್ರಿಕ ವೇದಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಕುಲೇಬಾ ಅವರೊಂದಿಗೆ ಮಾತನಾಡಲಿದ್ದಾರೆ ಎಂದು ರಷ್ಯಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಹೇಳಿದೆ.
ಈವರೆಗೆ ಅನೇಕ ಶಾಂತಿ ಮಾತುಕತೆಗಳು ನಿಯೋಗ ಮಟ್ಟದಲ್ಲಿ ನಡೆದಿದ್ದು, ಯಾವ ಸಭೆಯಲ್ಲೂ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಈಗ ಟರ್ಕಿಯಲ್ಲಿ ಸಭೆ ನಡೆಯಲಿದ್ದು, ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಅಂತಾರಾಷ್ಟ್ರೀಯ ರಾಜತಾಂತ್ರಿಕ ವೇದಿಕೆ ಸಭೆ ಶುಕ್ರವಾರ ನಡೆಯಲಿದ್ದು, ಅದಕ್ಕೂ ಮೊದಲೇ ಗುರುವಾರ ಸಭೆ ಉಕ್ರೇನ್ ಮತ್ತು ರಷ್ಯಾದ ವಿದೇಶಾಂಗ ಸಚಿವರ ಸಭೆ ನಡೆಯಲಿದೆ.