ಕೊಲಂಬೊ: ಪ್ರತಿಭಟನಾಕಾರರ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆಗೆ ತಿಳಿಸಿದ್ದಾರೆ. ಈ ಕುರಿತು ಪ್ರಧಾನಿ ಮಾಧ್ಯಮ ಘಟಕ ಪ್ರಕಟಣೆ ಹೊರಡಿಸಿದೆ.
ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರು ಜುಲೈ 13 ರಂದು ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮಾಧ್ಯಮಗೋಷ್ಠಿಯಲ್ಲಿ ಘೋಷಿಸಿದ್ದರು. ಆದ್ರೆ ಶನಿವಾರ ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ರಾಜೀನಾಮೆಗೆ ಆಗ್ರಹಿದ ಹಿನ್ನೆಲೆಯಲ್ಲಿ ಇಂದು ಅಧಿಕೃತವಾಗಿ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ.
ಪ್ರಧಾನಿ ರನಿಲ್ ವಿಕ್ರಮಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಆದರೆ, ಶ್ರೀಲಂಕಾ ಅಧ್ಯಕ್ಷರ ಅರಮನೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ಟೆಂಪಲ್ ಟ್ರೀ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿ, ಅವರ ಮನೆಯ ಆವರಣದಲ್ಲಿಯೇ ಅಡುಗೆ ಮಾಡಿದ್ದಾರೆ. ಜೊತೆಗೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಶ್ರೀಲಂಕಾ ಪ್ರಧಾನಿ ನಿವಾಸದ ಆವರಣದಲ್ಲಿ ಪ್ರತಿಭಟನಾಕಾರರ ಕ್ಯಾಂಪ್; ಭರ್ಜರಿ ಅಡುಗೆ, ಕೇರಂ ಆಟ