ಬೇಲೂರು(ಹಾಸನ): ವೃತ್ತಿಯನ್ನು ಕಾಯಂಗೊಳಿಸಬೇಕು ಎಂದು ಹಾಸನದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ವಾಪಸಾಗುತ್ತಿದ್ದ ವೇಳೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿರುವ ಘಟನೆ ಬೇಲೂರಿನಲ್ಲಿ ನಡೆದಿದೆ.
ಸಂಜು (25) ಮೃತ ದುರ್ದೈವಿ. ಹಿಂಬದಿ ಸವಾರ ನಾರಾಯಣ್ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಲ್ಲಿಕಾರ್ಜುನಪುರದ ಪೆಟ್ರೋಲ್ ಬಂಕ್ ಬಳಿ ಬೇಲೂರಿನಿಂದ ಹಾಸನಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಂಜು ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡ ನಾರಾಯಣ್ನನ್ನು ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ರಸ್ತೆಯಿಂದ ಸುಮಾರು 20 ಅಡಿ ದೂರಕ್ಕೆ ಬಿದ್ದಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಅತಿವೇಗ ಮತ್ತು ಚಾಲಕನ ಅಜಾಗರೂಕತೆ ಘಟನೆಗೆ ಕಾರಣ ಎನ್ನಲಾಗಿದ್ದು, ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಕಳೆದ 9 ದಿನಗಳಿಂದ ಹಾಸನದಲ್ಲಿ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. 'ಸಮಾನ ಕೆಲಸಕ್ಕೆ ಸಮಾನ ವೇತನ-ಸೇವಾ ಭದ್ರತೆ' ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.
ಇಂದು ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಆರೋಗ್ಯ ಸಹಾಯಕನಾಗಿ ಸೇವೆ ಸಲ್ಲಿಸುತ್ತಿರುವ ಸಂಜು ಮತ್ತು ನಾರಾಯಣ್ ಪ್ರತಿಭಟನೆಯಲ್ಲಿ ಭಾಗವಹಿಸಿ ವಾಪಸ್ ಕೆಲಸಕ್ಕೆ ಹಾಜರಾಗಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.