ಚಿಕ್ಕೋಡಿ: ಹತ್ತರಗಿಯಿಂದ ಸಂಕೇಶ್ವರ ಕಡೆಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿದೆ.
ಗುಲಾಬ್ ಶಾ ದರ್ಗಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಯಮಕನಮರಡಿ ಆರ್.ಸಿ. ಗ್ರಾಮದರಾದ ಚಂದ್ರು ನೌಕುಡಿ (23) ಹಾಗೂ ಕೆಂಪಣ್ಣ ಬರಗಾಲಿ (31) ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆ್ಯಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.