ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಕಾರು ಪಲ್ಟಿಯಾದ ಘಟನೆ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿ ನಡೆದಿದೆ.
ನಿದ್ದೆ ಮಂಪರಿನಲ್ಲಿದ್ದ ಚಾಲಕನಿಂದ ಕಾರಿನ ನಿಯಂತ್ರಣ ತಪ್ಪಿದ್ದು, ಹೊರನಾಡಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಈ ಅವಘಡ ನಡೆದಿದೆ. ಕಾರಿನ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ಉರುಳಿ ಬೀಳುತ್ತಿದ್ದಂತೆಯೇ ಅಕ್ಕಪಕ್ಕದಲ್ಲಿದ್ದಂತಹ ಸ್ಥಳೀಯರು ಕಾರಿನ ಬಳಿ ಬಂದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂರು ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.