ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆ ರದ್ದುಪಡಿಸುವಂತೆ ಕೋರಿ ಮಾಜಿ ಸಚಿವ ಕೆ.ಜೆ. ಜಾರ್ಜ್ ಸಲ್ಲಿಸಿರುವ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಹಿಂದೆ ಸರಿದಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರ್ಜ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ. ಈ ಸಮನ್ಸ್ ರದ್ದು ಕೋರಿ ಕೆ. ಜೆ. ಜಾರ್ಜ್ ಸಲ್ಲಿಸಿರುವ ಅರ್ಜಿ ಇಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು.
ಅರ್ಜಿ ವಿಚಾರಣೆಗೆ ಬರುತ್ತಲೇ, ನ್ಯಾ. ಸೂರಜ್ ಗೋವಿಂದರಾಜು ಅವರು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದರು. ಅಲ್ಲದೇ ಬೇರೊಂದು ಪೀಠದ ಮುಂದೆ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್‌ಗೆ ನಿರ್ದೇಶಿಸಿದರು.
ಪ್ರಕರಣದ ಹಿನ್ನೆಲೆ: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಅಂದಿನ ಗೃಹ ಸಚಿವ ಕೆ.ಜೆ ಜಾರ್ಜ್ ಅವರು ಕಾರಣರಾಗಿದ್ದರು ಎಂಬ ಆರೋಪ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಪ್ರಕರಣವನ್ನು ತನಿಖೆ ನಡೆಸಿದ್ದ ಸಿಬಿಐ ಸಹ 2019ರ ಅ.30ರಂದು ಬಿ ರಿಪೋರ್ಟ್ ಸಲ್ಲಿಸಿತ್ತು.
ಸಿಬಿಐ ವರದಿ ತಿರಸ್ಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡು ವಿಚಾರಣೆಗೆ ಹಾಜರಾಗುವಂತೆ ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿದೆ.
ಈ ಸಮನ್ಸ್ ರದ್ದು ಕೋರಿರುವ ಮಾಜಿ ಸಚಿವ ಜಾರ್ಜ್, ಪ್ರಕರಣದ ಸಂಬಂಧ ಕಾಗ್ನಿಜೆನ್ಸ್ ತೆಗೆದುಕೊಳ್ಳುವ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯ ಲೋಪವೆಸಗಿದೆ ಎಂದು ಆರೋಪಿಸಿದ್ದಾರೆ. ಸಿಬಿಐ ವರದಿ ತಿರಸ್ಕರಿಸಿರುವ ವಿಶೇಷ ನ್ಯಾಯಾಲಯದ ಆದೇಶ ಹಾಗೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ಮಾಡಿರುವ ಸಮನ್ಸ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸಬೇಕು ಎಂದು ಜಾರ್ಜ್ ಅರ್ಜಿಯಲ್ಲಿ ಕೋರಿದ್ದಾರೆ.