ಭೋಪಾಲ್ (ಮಧ್ಯಪ್ರದೇಶ): ಪಿಕಪ್ ವಾಹನ ಪಲ್ಟಿಯಾಗಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶ ಶಿವಪುರಿ ನಗರದ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪೊಹ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಕ್ರ ಗ್ರಾಮದ ಪೋಹ್ರಿ-ಶಿಯೋಪುರ ರಸ್ತೆಯಲ್ಲಿ ಶುಕ್ರವಾರ ಸಂಜೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ ಎಂದು ಶಿವಪುರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಚಂದೇಲ್ ಮಾಹಿತಿ ನೀಡಿದ್ದಾರೆ.
ಪಿಕಪ್ ವಾಹನದಲ್ಲಿದ್ದವರು ಶಿಯೋಪುರ ಜಿಲ್ಲೆಯ ಮೊರವಾನ್ ಗ್ರಾಮಕ್ಕೆ ತೆರಳಿ ಅಲ್ಲಿನ ಸಂಬಂಧಿಯೋರ್ವನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ವಿಜಯ್ಪುರ ನಗರದ ತಮ್ಮ ನಿವಾಸಗಳಿಗೆ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಕಪ್ ವಾಹನದಲ್ಲಿದ್ದ ಸುಮಾರು 40 ಜನರಲ್ಲಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಕುರಿತು ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.