ನವದೆಹಲಿ: ಉತ್ತರಪ್ರದೇಶದ ಹಥ್ರಾಸ್‌ನಲ್ಲಿ ನಡೆದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ಇದರ ಮೇಲ್ವಿಚಾರಣೆಯನ್ನು ಸುಪ್ರೀಂಕೋರ್ಟ್ ವಹಿಸಿಕೊಳ್ಳುವಂತೆ ಯುಪಿ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಮೃತ ಸಂತ್ರಸ್ತೆಯ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಕೂಡ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಉಲ್ಲೇಖಿಸಲಾಗಿದ್ದು, ಆಕೆ ಸಾವನ್ನಪ್ಪಿದ ಮರುದಿನ ಬೆಳಗ್ಗೆ ದೊಡ್ಡ ಮಟ್ಟದಲ್ಲಿ ನಡೆಯುವ ಹಿಂಸಾಚಾರವನ್ನು ತಪ್ಪಿಸುವ ಸಲುವಾಗಿ ರಾತ್ರಿಯೇ ಶವ ಸಂಸ್ಕಾರ ಮಾಡಲು ಜಿಲ್ಲಾಡಳಿತವು ಯುವತಿಯ ಪೋಷಕರಿಗೆ ತಿಳಿಸಿ ಕ್ರಮ ಕೈಗೊಂಡಿತ್ತು ಎಂದು ಉತ್ತರಪ್ರದೇಶ ಸರ್ಕಾರ ತಿಳಿಸಿದೆ. ಇನ್ನು ಪ್ರಕರಣ ಸಂಬಂಧ ಸಿಬಿಐ ಹಾಗೂ ಎಸ್ಐಟಿ ತನಿಖೆಯ ಮಾಹಿತಿಯನ್ನ ಸಹ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಸೆಪ್ಟೆಂಬರ್ 14ರಂದು ಉತ್ತರಪ್ರದೇಶದ ಹಥ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು, ಬರ್ಬರವಾಗಿ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ತರ್ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಮೃತದೇಹವನ್ನು ಸಂತ್ರಸ್ತೆಯ ಕುಟುಂಬಕ್ಕೆ ಹಸ್ತಾಂತರಿಸದೆ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು.