ಪಾಟ್ನಾ(ಬಿಹಾರ): ಕಳೆದ ತಿಂಗಳು ಆತ್ಮಹತ್ಯೆಗೆ ಶರಣಾಗಿರುವ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಇದೀಗ ಪ್ರಕರಣ ದಾಖಲಾಗಿದ್ದು, ನಟನ ತಂದೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.
ಕಳೆದ ತಿಂಗಳ ಜೂನ್ 14ರಂದು ಮುಂಬೈನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿದ್ದರು. ಇದಾದ ತಿಂಗಳ ಬಳಿಕ ನಟಿ ರಿಯಾ ವಿರುದ್ಧ ಅವರ ತಂದೆ ದೂರು ದಾಖಲು ಮಾಡಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಪೋಷಕರು ದೂರಿನಲ್ಲಿ ತಿಳಿಸಿರುವ ಪ್ರಕಾರ, ರಿಯಾ ಚಕ್ರವರ್ತಿ ತಮ್ಮ ಮಗ ಆತ್ಮಹತ್ಯೆ ಮಾಡಿಕೊಳ್ಳಲು ಮುಖ್ಯ ಕಾರಣವಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ್ದು, ಜತೆಗೆ ಆರ್ಥಿಕವಾಗಿ ಮೋಸ ಮಾಡಿ, ಮಾನಸಿಕವಾಗಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಇದೇ ವಿಚಾರವಾಗಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿಕೊಂಡಿದ್ದ ರಿಯಾ, ಸುಶಾಂತ್ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆ ನಡೆಸಬೇಕು. ಪ್ರಕರಣದಲ್ಲಿ ಲೋಪದೋಷವಿಲ್ಲದೇ ತನಿಖೆ ಆಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಬೇಡಿಕೆ ಇಟ್ಟಿದ್ದರು. ಈಗಾಗಲೇ ಅನೇಕರ ವಿಚಾರಣೆ ನಡೆಸಿರುವ ಮುಂಬೈ ಪೊಲೀಸರು ಇದೀಗ ಕರಣ್ ಜೋಹರ್ಗೂ ವಿಚಾರಣೆಗೋಸ್ಕರ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.