ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಆಸ್ಟ್ರೇಲಿಯಾದ ರನ್ ಮಷಿನ್ ಸ್ಟೀವ್ ಸ್ಮಿತ್ ಟೆಸ್ಟ್ನಲ್ಲಿ ಅಗ್ರಸ್ಥಾನದಲ್ಲಿದ್ದು, ವಿರಾಟ್ ಕೊಹ್ಲಿ ಮತ್ತು ಆಸೀಸ್ ಆಟಗಾರ ಮಾರ್ನಸ್ ಲಾಬುಶೇನ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿದ್ದಾರೆ.
ಟಿ-20 ಶ್ರೇಯಾಂಕದಲ್ಲಿ ಭಾರತದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಕೆ.ಎಲ್.ರಾಹುಲ್ ಎರಡನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಪಾಕಿಸ್ತಾನದ ಬಾಬರ್ ಅಜಮ್ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಆರನ್ ಫಿಂಚ್ ತೃತೀಯ ಸ್ಥಾನದಲ್ಲಿದ್ದಾರೆ.
ಏಕದಿನ ಬೌಲಿಂಗ್ ಶ್ರೇಯಾಂಕದಲ್ಲಿ ಭಾರತದ ವೇಗಿ ಜಸ್ಪ್ರಿತ್ ಬುಮ್ರಾ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮ್ಮಿನ್ಸ್ ಟೆಸ್ಟ್ ಪಂದ್ಯಗಳಲ್ಲಿ ಅಗ್ರಸ್ಥಾನ ಮತ್ತು ಟಿ-20 ಪಂದ್ಯಗಳಲ್ಲಿ ಅಫ್ಘಾನಿಸ್ತಾನದ ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಮೊದಲ ಸ್ಥಾನದಲ್ಲಿದ್ದಾರೆ.
ತಂಡಗಳಲ್ಲಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತವು ಏಕದಿನ ಪಂದ್ಯಗಳಲ್ಲಿ ಎರಡನೇ ಸ್ಥಾನದಲ್ಲಿದ್ದು, ಟೆಸ್ಟ್ ಮತ್ತು ಟಿ-20 ಕ್ರಿಕೆಟ್ನಲ್ಲಿ ಮೂರನೇ ಸ್ಥಾನದಲ್ಲಿದೆ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಐದೂವರೆ ತಿಂಗಳುಗಳಿಂದ ಭಾರತ ತಂಡವು ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡಿಲ್ಲ. ಆದರೂ ವಿರಾಟ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.