ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯಕೀಯ ತಂಡ ನಡೆಸಿದ ಫಿಟ್‌ನೆಸ್ ಪರೀಕ್ಷೆಯಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಉತ್ತೀರ್ಣರಾಗಿದ್ದು, ಅವರಿಗೆ ಆಸೀಸ್ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಬಿಸಿಸಿಐ ವೈದ್ಯಕೀಯ ತಂಡದ ಜೊತೆಗೆ ಎನ್‌ಸಿಎ ನಿರ್ದೇಶಕ ರಾಹುಲ್ ದ್ರಾವಿಡ್ ಅವರು ಆಯ್ಕೆಗಾರರ ಮೇಲ್ವಿಚಾರಣೆಯಲ್ಲಿ ಫಿಟ್‌ನೆಸ್ ಪರೀಕ್ಷೆ ನಡೆಸಿದರು ಎಂದು ಬಿಸಿಸಿಐ ಪ್ರಕಟಣೆ ಹೊರಡಿಸಿದೆ.
ಡಿಸೆಂಬರ್ 17 ರಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಮುನ್ನ ಹಿಟ್‌ಮ್ಯಾನ್ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆ ಆಗಿರುವುದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.
ಓದಿ: ಭಾರತ-ಆಸ್ಟ್ರೇಲಿಯಾ ಬಾಕ್ಸಿಂಗ್ ಡೇ ಟೆಸ್ಟ್.. 30 ಸಾವಿರ ಪ್ರೇಕ್ಷಕರಿಗೆ ಅವಕಾಶ!
ರೋಹಿತ್ ಒಂದೆರಡು ದಿನಗಳಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ರೆ, 14 ದಿನ ಕ್ವಾರಂಟೈನ್ ನಿಯಮ ಪಾಲಿಸಬೇಕಿದೆ. ಹೀಗಾಗಿ ಆಸೀಸ್ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಲಭ್ಯವಾಗುವ ಸಾಧ್ಯತೆ ಇದೆ. ಐಪಿಎಲ್ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ರೋಹಿತ್ ಶರ್ಮಾ ಕಳೆದ ಕೆಲ ವಾರಗಳಿಂದ ಎನ್‌ಸಿಎಯಲ್ಲಿ ಕೆಲವು ಪರೀಕ್ಷೆಗಳನ್ನು ಎದುರಿಸುತ್ತಿದ್ದರು.