ವಿಜಯನಗರಂ: ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾದರೂ 11ರ ಬಳಗದಲ್ಲಿ ಆಡುವ ಅವಕಾಶ ಪಡೆಯುವಲ್ಲಿ ವಿಫಲರಾಗುತ್ತಿರುವ ರೋಹಿತ್ ಶರ್ಮಾ ಅಭ್ಯಾಸ ಪಂದ್ಯದಲ್ಲೂ ಕೂಡ ರನ್ ಗಳಿಸಲಾಗದೆ ನಿರಾಸೆ ಅನುಭವಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.
ಏಕದಿನ ಕ್ರಿಕೆಟ್ನಲ್ಲಿ ಓಪನರ್ ಆಗಿ ಹಿಟ್ಮ್ಯಾನ್ ಭರ್ಜರಿ ಸಕ್ಸಸ್ ಕಂಡಿರುವುದು ಕ್ರಿಕೆಟ್ ಜಗತ್ತಿಗೆ ಗೊತ್ತು. ಆದರೆ ಟೆಸ್ಟ್ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಅವರು ಗಮನಾರ್ಹ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಆರಂಭಿಕರಾಗಿ ಕಣಕ್ಕಿಳಿಸುವಂತೆ ಕೆಲ ಮಾಜಿ ಆಟಗಾರರಿಂದ ಸಲಹೆಗಳು ಕೇಳಿಬಂದಿದ್ದವು. ಆದರೆ ಇದೀಗ ನಡೆಯುತ್ತಿರುವ ಅಭ್ಯಾಸ ಪಂದ್ಯದಲ್ಲಿ ಅಧ್ಯಕ್ಷರ ಇಲೆವೆನ್ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್ ಎರಡು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡರು. ಹೀಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಎಡವಿದರು.
ಮೊದಲು ಬ್ಯಾಟಿಂಗ್ ನಡೆಸಿದ ದ. ಆಫ್ರಿಕಾ ಮೊದಲ ಇನ್ನಿಂಗ್ಸ್ನಲ್ಲಿ 64 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 279 ರನ್ ಪೇರಿಸಿದೆ. ತಂಡದ ಪರ ನಾಯಕ ಅಡೆನ್ ಮಾರ್ಕ್ರಮ್ ಶತಕ ದಾಖಲಿಸಿದರು. ಈ ಮೊತ್ತಕ್ಕೆ ಉತ್ತರವಾಗಿ ಬ್ಯಾಟಿಂಗ್ಗಳಿದ ಅಧ್ಯಕ್ಷರ ಇಲೆವೆನ್ 11 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 23 ರನ್ ಗಳಿಸಿದೆ.