ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ನೇತೃತ್ವದ ಭಾರತದ ಆಟಗಾರರು ಕೈಗೆ ಕಪ್ಪು ಬ್ಯಾಂಡ್ ಕಟ್ಟಿಕೊಂಡು ಆಡುವ ಮೂಲಕ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ, ಲತಾ ಮಂಗೇಶ್ಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಆಟಗಾರರು ಕಪ್ಪು ಬ್ಯಾಂಡ್ ಧರಿಸುತ್ತಾರೆ. ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರಿಗೆ ಸಂದ ಪ್ರಶಸ್ತಿ ಮತ್ತು ಗೌರವಗಳಿವು..
ಅನಾರೋಗ್ಯದಿಂದ ಬಳಲುತ್ತಿದ್ದ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು ತಮ್ಮ 92ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಅವರ ಸ್ಮರಣಾರ್ಥವಾಗಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ಗೌರವಾರ್ಥವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಮತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಭಾರತ ಸರ್ಕಾರ ತಿಳಿಸಿದೆ.