ಭಾರತ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಕೈ ಗಾಯದಿಂದಾಗಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ವೇಗದ ಬೌಲರ್ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯು ನಾಳೆ ಭಾನುವಾರ ಮೀರ್‌ಪುರದ ಶೇರ್ ಎ ಬಾಂಗ್ಲಾ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಶಮಿ ಏಕದಿನ ಮತ್ತು ಟೆಸ್ಟ್ ತಂಡಗಳ ಭಾಗವಾಗಿದ್ದರು.
ಟಿ20 ವಿಶ್ವಕಪ್ ಮುಖಭಂಗದ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಜೊತೆ ಶಮಿಗೆ ಕೂಡ ನ್ಯೂಜಿಲೆಂಡ್ ಪ್ರವಾಸದಿಂದ ವಿರಾಮ ನೀಡಲಾಗಿತ್ತು. ಈಗಾಗಲೇ ಬಾಂಗ್ಲಾ ಸರಣಿಗೆ ಬೌಲರ್ಗಳಾದ ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್ ಮತ್ತು ಯುವ ಕುಲದೀಪ್ ಸೇನ್ ತಂಡದಲ್ಲಿದ್ದಾರೆ.
ಅಲ್ಲದೆ, ಗಾಯವು ಗಂಭೀರವಾಗಿದ್ದರೆ ಶಮಿ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಹೊರಗುಳಿಯಬಹುದು. ಸದ್ಯ ಭಾರತ ತಂಡ ಮೀರ್‌ಪುರದಲ್ಲಿದೆ. ಶುಕ್ರವಾರ ಅಭ್ಯಾಸದಲ್ಲಿ ತಂಡದ ಎಲ್ಲ ಸದಸ್ಯರು ಭಾಗವಹಿಸಿದ್ದರು. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಸಾಕಷ್ಟು ಟೀಕೆ ಎದುರಿಸಿದ ಭಾರತದ ಅಗ್ರ ಕ್ರಮಾಂಕದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.
ಮುಂದಿನ ವರ್ಷ ತವರಿನಲ್ಲಿ ನಡೆಯಲಿರುವ ವಿಶ್ವಕಪ್‌ಗೆ ತಯಾರಿ ನಡೆಸುತ್ತಿರುವ ಭಾರತ ತಂಡವು ಈ ಏಕದಿನ ಸರಣಿಯಲ್ಲಿ ಪೂರ್ಣ ಪ್ರಮಾಣದ ಸಾಮರ್ಥ್ಯದೊಂದಿಗೆ ಕಣಕ್ಕಿಳಿಯುತ್ತಿದೆ. ಇತ್ತೀಚೆಗೆ ನ್ಯೂಜಿಲೆಂಡ್‌ನಲ್ಲಿ ಮುಕ್ತಾಯಗೊಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಮತ್ತು ಉಪನಾಯಕ ರಾಹುಲ್ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ತಂಡದ ಮುಂದಾಳತ್ವ ವಹಿಸಿದ್ದರು.
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಕುಲದೀಪ್ ಸೇನ್, ಉಮ್ರಾನ್ ಮಲಿಕ್
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಶಾರ್ದೂಲ್ ಠಾಕೂರ್.
ಇದನ್ನೂ ಓದಿ: ಮಹಾರಾಷ್ಟ್ರ ಮಣಿಸಿ ಎರಡನೇ ಬಾರಿಗೆ ವಿಜಯ್ ಹಜಾರೆ ಟ್ರೋಫಿಗೆ ಮುತ್ತಿಕ್ಕಿದ ಸೌರಾಷ್ಟ್ರ