ಅಹಮದಾಬಾದ್: ಮಾರ್ಚ್ 9ರಂದು(ನಾಳೆ) ಇಲ್ಲಿನ ಮೊಟೆರಾದ ನರೇಂದ್ರ ಮೋದಿ ಮೈದಾನದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಮೂರು ದಿನಗಳ ಕಾಲ ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ವೀಕ್ಷಣೆ ಮಾಡಲಿದ್ದಾರೆ.
ಸುಮಾರು 1,32,000 ಲಕ್ಷ ಜನರು ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯ ಹೊಂದಿರುವ ಕ್ರಿಕೆಟ್ ಸ್ಟೇಡಿಯಂ ಇದಾಗಿದ್ದು, ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಹೆಚ್ಚಿನ ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣ ಸೇರಿದಂತೆ ನಗರದಾದ್ಯಂತ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ಸುಮಾರು 3,000 ಖಾಕಿ ಪಡೆಯನ್ನು ನಿಯೋಜನೆ ಮಾಡುವುದಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ ನೀರಜ್ ಬದ್ಗುಜರ್ ಮಂಗಳವಾರ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟವನ್ನು ಮೈದಾನದಲ್ಲಿ ಕುಳಿತು ವೀಕ್ಷಣೆ ಮಾಡುವರು. ಈಗಾಗಲೇ ಪೊಲೀಸ್ ಪಡೆ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಯನ್ನು ಪೂರ್ಣಗೊಳಿಸಿದೆ. ಕ್ರೀಡಾಂಗಣದ ಹೊರ ಮತ್ತು ಒಳಭಾಗ ಸೇರಿದಂತೆ ಹಲವು ಸ್ಥಳಗಳಲ್ಲಿ ಭದ್ರತೆಗಾಗಿ 200 ಪೊಲೀಸ್ ಅಧಿಕಾರಿಗಳು ಹಾಗೂ 3,000 ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಜಂಟಿ ಪೊಲೀಸ್ ಆಯುಕ್ತ ಎನ್.ಎನ್ ಚೌಧರಿ ಹೇಳುವ ಪ್ರಕಾರ, ಸುಮಾರು 1,500 ಬಸ್‌ಗಳಲ್ಲಿ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಈ ಬಸ್‌ಗಳು ಮತ್ತು ಇತರ ವಾಹನಗಳಿಗೆ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕಾರು, ಬಸ್ ಸೇರಿದಂತೆ ಇತರೆ ವಾಹನಗಳಲ್ಲಿ ಸ್ಟೇಡಿಯಂಗೆ ಬರುವ ಅಭಿಮಾನಿಗಳಿಗೆ ವಿವಿಧೆಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಸೂಕ್ತ ಮಾಹಿತಿ ನೀಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಎನ್.ಎನ್.ಚೌಧರಿ ಹೇಳಿದ್ದಾರೆ.
ಗುಜರಾತ್ ಕ್ರಿಕೆಟ್ ಮಂಡಳಿ ವ್ಯವಹಾರಗಳ ಹಿರಿಯ ಅಧಿಕಾರಿಯ ಪ್ರಕಾರ, ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಣೆಗೆ ಇಬ್ಬರು ಗಣ್ಯ ವ್ಯಕ್ತಿಗಳು ಆಗಮಿಸಲಿರುವ ಬಗ್ಗೆ ಶೀಘ್ರದಲ್ಲೇ ಮತ್ತೊಮ್ಮೆ ಅನೌಪಚಾರಿಕವಾಗಿ ಘೋಷಣೆ ಮಾಡಲಾಗುತ್ತದೆ. ವಿಶ್ವಸನೀಯ ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಬಂದಿಳಿಯುವರು. ಇಲ್ಲಿಯ ಪಂಚತಾರಾ ಹೋಟೆಲ್‌ನಲ್ಲಿ ಆಸ್ಟ್ರೇಲಿಯಾ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿಯಾಗಲಿದ್ದಾರೆ. ನಾಳೆ ಇಬ್ಬರು ಗಣ್ಯರು ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್ ಪಂದ್ಯ ವೀಕ್ಷಿಸಿ ದೆಹಲಿಗೆ ಹಿಂತಿರುಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಪೈಕಿ ಮೂರು ಪಂದ್ಯಗಳು ಮುಗಿದಿವೆ. ಭಾರತ 2-1 ಅಂತರದಿಂದ ಮುನ್ನಡೆಯಲ್ಲಿದೆ. ನಾಲ್ಕನೇ ಪಂದ್ಯ ಗೆದ್ದರೆ ನೇರವಾಗಿ ಟೆಸ್ಟ್ ವಿಶ್ವಕಪ್ ಚಾಂಪಿಯನ್‌ಶಿಪ್ ಫೈನಲ್ಗೆ ಭಾರತ ಪ್ರವೇಶಿಸಲಿದೆ.
ಇದನ್ನೂ ಓದಿ: ಯುಪಿಗೆ ಗೆಲುವು ತಂದು ಕೊಡದ ತಾಲಿಯಾ ಮೆಕ್‌ಗ್ರಾತ್ ಸ್ಫೋಟಕ ಆಟ: ದೆಹಲಿಗೆ 42 ರನ್ಗಳಿಂದ ಗೆಲುವು