ನವದೆಹಲಿ: ಸೌರವ್ ಗಂಗೂಲಿ ಅವರಿಂದ ತೆರವಾಗಿದ್ದ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.
ಇಂದು ನಡೆದ ಬಿಸಿಸಿಐ ಸಭೆಯಲ್ಲಿ ರೋಜರ್ ಬಿನ್ನಿ ಅವರ ಆಯ್ಕೆಯನ್ನು ಘೋಷಿಸಲಾಯಿತು. ಅಧ್ಯಕ್ಷ ಸ್ಥಾನಕ್ಕೆ ರೋಜರ್ ಬಿನ್ನಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರೋಜರ್ ಬಿನ್ನಿ ಬಿಸಿಸಿಐನ 36 ನೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಐಸಿಸಿ ಸ್ಪರ್ಧೆ ಬಗ್ಗೆ ಚರ್ಚೆ ಇಲ್ಲ: ಇಂದಿನ ಬಿಸಿಸಿಐ ಸಭೆಯಲ್ಲಿ ಅಂತಾರಾಷ್ಟ್ರೀ ಕ್ರಿಕೆಟ್ ಮಂಡಳಿಗೆ ಸ್ಪರ್ಧಿಸುವ ಕುರಿತಾಗಿ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಪ್ರಸ್ತಾಪವೇ ಆಗಿಲ್ಲ. ಮುಂದೆ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ ಮೊಹಮದ್ ಅಜರುದ್ದೀನ್ ತಿಳಿಸಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿರುವ ಸೌರವ್ ಗಂಗೂಲಿ ಅವರು ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು ಎಂದು ಹೇಳಲಾಗಿತ್ತು. ಹೀಗಾಗಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ತೆರವಾಗಿದ್ದರು. ಬಳಿಕ ನಡೆದ ವಿದ್ಯಮಾನದಲ್ಲಿ ಬಂಗಾಳ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಓದಿ: ಬಿಸಿಸಿಐಗೆ ಹೊಸ ಬಾಸ್ ಖಚಿತ.. ದಾದಾ ಜಾಗಕ್ಕೆ ಕನ್ನಡಿಗ ರೋಜರ್ ಬಿನ್ನಿ