ನವದೆಹಲಿ: ಆಸ್ಟ್ರೇಲಿಯಾದಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಬಳಿಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳಲಿ ಎಂದು ಪಾಕಿಸ್ತಾನ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಸಲಹೆ ನೀಡಿದ್ದಾರೆ. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ಗಮನ ಹರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳುವುದು ಸೂಕ್ತ. ಒಂದು ವೇಳೆ ನಾನು ಅವರ ಸ್ಥಾನದಲ್ಲಿದ್ದಿದ್ದರೆ ಖಂಡಿತವಾಗಿಯೂ ಅಂತಹ ನಿರ್ಧಾರ ಕೈಗೊಳ್ಳುತ್ತಿದ್ದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ನಡೆದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಮರಳಿ ಫಾರ್ಮ್ ಕಂಡುಕೊಂಡಿದ್ದು, ಅಫ್ಘಾನಿಸ್ತಾನ ವಿರುದ್ಧ ಅದ್ಭುತ ಶತಕ ಸಿಡಿಸಿ ಮಿಂಚಿದ್ದರು. ಅಲ್ಲದೇ ಟೂರ್ನಿಯಲ್ಲಿ ಅತಿ ಹೆಚ್ಚು ರನ್ಗಳಿಸಿರುವ ಎರಡನೇ ಪ್ಲೇಯರ್ ಆಗಿಯೂ ಕೊಹ್ಲಿ ಹೊರ ಹೊಮ್ಮಿದ್ದರು. ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ಕಾಲ ಆಡಬೇಕಾದರೆ ಅವರು ಇಂತಹ ನಿರ್ಧಾರ ಕೈಗೊಳ್ಳುವುದು ಅತಿ ಅವಶ್ಯ ಎನ್ನುವುದು ಅಖ್ತರ್ ಅಭಿಪ್ರಾಯ.
ಇದನ್ನೂ ಓದಿ: ಕೊಹ್ಲಿ ನಾನು ಒಳ್ಳೆಯ ಸ್ನೇಹಿತರು, ಮೈದಾನದಲ್ಲಿ ಬದ್ಧ ವೈರಿಗಳು: ಶೋಯೆಬ್ ಅಖ್ತರ್
ಕಾಂಗರೂ ನೆಲದಲ್ಲಿ ಅಕ್ಟೋಬರ್ 16 ರಿಂದ ಟಿ20 ವಿಶ್ವಕಪ್ ಟೂರ್ನಮೆಂಟ್ ಅರಂಭಗೊಳ್ಳಲಿದೆ. ನವೆಂಬರ್ 13ರಂದು ಫೈನಲ್ ಪಂದ್ಯ ನಡೆಯಲಿದೆ. ಟೀಂ ಇಂಡಿಯಾ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಸೆಣಸಾಡುವ ಮೂಲಕ ಅಭಿಯಾನ ಆರಂಭಿಸಲಿದೆ.
2019 ರಿಂದಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ವಿರಾಟ್ ಮೂರು ವರ್ಷಗಳ ಬಳಿಕ ಶತಕ ಸಾಧನೆ ಮಾಡಿದ್ದಾರೆ. ಸದ್ಯ ಟಿ20 ವಿಶ್ವಕಪ್ಗೆ ತಯಾರಿಯಲ್ಲಿದ್ದಾರೆ. ಅದಕ್ಕೂ ಮೊದಲು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಟಿ20 ಸರಣಿಯಲ್ಲಿ ಅವರು ಕಣಕ್ಕಿಳಿಯುವರು.