ಮುಂಬೈ: ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ನಂತರ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಆಗಲಿದ್ದು, ನಿಗದಿತ ಓವರ್ಗಳ ಕ್ರಿಕೆಟ್ಗೆ ರೋಹಿತ್ ಶರ್ಮಾ ನಾಯಕ ಎಂಬ ವದಂತಿ ಹಬ್ಬಿತ್ತು. ಇದಕ್ಕೆ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ: ಟೀಂ ಇಂಡಿಯಾ 5ನೇ ಟೆಸ್ಟ್ ಪಂದ್ಯ ಆಡದಿರಲು ಕಾರಣವೇನು? ಗಂಗೂಲಿ ಸ್ಪಷ್ಟನೆ ಹೀಗಿದೆ..
ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ ಮುಕ್ತಾಯಗೊಳ್ತಿದ್ದಂತೆ ವಿರಾಟ್ ಕೊಹ್ಲಿ ಟೆಸ್ಟ್ ತಂಡಕ್ಕೆ ಮಾತ್ರ ನಾಯಕನಾಗಿರಲಿದ್ದಾರೆ. ರೋಹಿತ್ ಶರ್ಮಾ ಟಿ-20 ಹಾಗೂ ಏಕದಿನ ಕ್ರಿಕೆಟ್ನ ಕ್ಯಾಪ್ಟನ್ ಆಗಲಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಸಿಸಿಐ ಖಜಾಂಚಿ ಅರುಣ್ ಧುಮಾಲ್, 'ಮಾಧ್ಯಮಗಳಲ್ಲಿ ಪ್ರಕಟಗೊಂಡಿರುವ ವರದಿ ನಿಜವಲ್ಲ. ಕೊಹ್ಲಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕೆಂಬುದರ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ' ಎಂದು ತಿಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ಯಶಸ್ವಿಯಾಗುತ್ತಿರುವ ವಿರಾಟ್ ಕೊಹ್ಲಿ, ವಿಶ್ವಕಪ್ ಕ್ರಿಕೆಟ್ ಮುಕ್ತಾಯದ ಬಳಿಕ ಸೀಮಿತ ಓವರ್ಗಳ ನಾಯಕತ್ವ ಬಿಟ್ಟುಕೊಡಲಿದ್ದು, ಈ ಜವಾಬ್ದಾರಿಯನ್ನು ರೋಹಿತ್ ಶರ್ಮಾಗೆ ನೀಡಲಾಗುವುದು ಎಂಬ ಮಾತು ಕೇಳಿ ಬಂದಿತ್ತು.