ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಟ್ರಂಪ್ ಕಾರ್ಡ್ ಆಗಿದ್ದ ಶಾರ್ದೂಲ್ ಠಾಕೂರ್ ಟೀಂ ಇಂಡಿಯಾ ಪರ ವಿಶ್ವಕಪ್ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಪಾಕ್ ವಿರುದ್ಧದ ಪಂದ್ಯದಲ್ಲಿ ಅವರು ಕಣಕ್ಕಿಳಿದಿರಲಿಲ್ಲ. ಈಗಾಗಲೇ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಟೀಂ ಇಂಡಿಯಾಗೆ ಮುಂದಿನ ಎಲ್ಲ ಪಂದ್ಯಗಳಲ್ಲೂ ಗೆಲುವು ಸಾಧಿಸಬೇಕಾದ ಅನಿವಾರ್ಯತೆ ನಿರ್ಮಾಣಗೊಂಡಿದೆ.
ಈಗಾಗಲೇ ಕೊಹ್ಲಿ ಪಡೆ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಲಭ್ಯವಾಗಿರುವ ಮಾಹಿತಿ ಪ್ರಕಾರ ಶಾರ್ದೂಲ್ ಠಾಕೂರ್ಗೆ ಮಣೆ ಹಾಕುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದ್ದು, ಪಾಕ್ ವಿರುದ್ಧ ಕಣಕ್ಕಿಳಿದಿದ್ದ ತಂಡದೊಂದಿಗೆ ಕೊಹ್ಲಿ ಮೈದಾನಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
ಕೇವಲ ಒಂದು ಪಂದ್ಯದಲ್ಲಿ ಸೋತ ಕಾರಣಕ್ಕಾಗಿ ಅಥವಾ ಕಳಪೆ ಪ್ರದರ್ಶನ ನೀಡಿದಕ್ಕಾಗಿ ಬೇರೆ ಆಟಗಾರರಿಗೆ ಅವಕಾಶ ನೀಡುವುದು ಸರಿಯಲ್ಲ ಎಂಬ ಮನೋಭಾವ ಟೀಂ ಇಂಡಿಯಾ ಹೊಂದಿದೆ. ಬೇರೆ ಆಟಗಾರರು ಆಡಲು ಸಾಧ್ಯವಾಗದ ಸಂದರ್ಭದಲ್ಲಿ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗುವುದು ಎಂಬ ಮಾಹಿತಿ ತಿಳಿದು ಬಂದಿದೆ.
ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ಗೆ ಪ್ರವೇಶ ಪಡೆದುಕೊಳ್ಳಬೇಕಾದರೆ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಬೇಕಾದ ಅನಿವಾರ್ಯತೆಯಲ್ಲಿದೆ. ಹೀಗಾಗಿ ತಂಡದಲ್ಲಿ ಕೆಲವೊಂದಿಷ್ಟು ಬದಲಾವಣೆ ಮಾಡಿಕೊಳ್ಳಬೇಕು ಎಂಬ ಮಾತು ಕೇಳಿ ಬರಲು ಶುರುವಾಗಿವೆ
ಆದರೆ, ಟೀಂ ಇಂಡಿಯಾ ಇದರ ಬಗ್ಗೆ ಹೆಚ್ಚಿನ ತಲೆ ಕೆಡಿಸಿಕೊಂಡಿಲ್ಲ ಎನ್ನಲಾಗಿದೆ. ಶಾರ್ದೂಲ್ ಠಾಕೂರ್ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿರುವ ಕಾರಣ, ಹೆಚ್ಚಿನ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಶಾರ್ದೂಲ್ ಠಾಕೂರ್ ವಿಕೆಟ್ ಟೇಕಿಂಗ್ ಬೌಲರ್ ಆಗಿದ್ದರೂ ಕೂಡ ಪ್ರತಿ ಓವರ್ಗೆ 9 ರನ್ಬಿಟ್ಟುಕೊಟ್ಟು ದುಬಾರಿ ಬೌಲರ್ ಆಗಿದ್ದಾರೆ. ಹೀಗಾಗಿ ಹಾರ್ದಿಕ್ ಬೌಲಿಂಗ್ ಮಾಡಲು ಶುರು ಮಾಡಿರುವ ಕಾರಣ ಮತ್ತೊಂದು ಅವಕಾಶ ನೀಡುವ ಸಾಧ್ಯತೆ ಇದೆ. ಉಭಯ ತಂಡಗಳ ಮಧ್ಯೆ ಭಾನುವಾರ ಸಂಜೆ ಪಂದ್ಯ ನಡೆಯಲಿದೆ.