ಬಾಗಲಕೋಟೆ: ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಭೀತಿ ಕ್ರಮೇಣ ಇಳಿಮುಖವಾಗುತ್ತಿದೆ. ಜನರಲ್ಲಿ ಕೊರೊನಾ ಲಕ್ಷಣಗಳು ಇರುವುದು ಕೂಡಾ ಕಡಿಮೆಯಾಗುತ್ತಿದೆ. ಈಗಾಗಲೇ 21 ಸೋಂಕಿತರ ಪೈಕಿ ಇಬ್ಬರು ಸಂಪೂರ್ಣ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಂತಸದ ವಿಷಯವಾಗಿದೆ ಎಂದರು.
ಕೊರೊನಾ ವ್ಯಾಪಿಸುವುದನ್ನು ಕಠಿಣ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲಾಡಳಿತ ನಿಯಂತ್ರಣಕ್ಕೆ ತರುವ ಕೆಲಸ ಮಾಡುತ್ತಿದೆ ಎಂದರು. ಇನ್ನು 28 ದಿನಗಳ ಕ್ವಾರಂಟೈನ್ ಪೂರ್ಣಗೊಂಡವರನ್ನು ಮನೆಗೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುವ ವೈದ್ಯರು, ಇತರೆ ಸಿಬ್ಬಂದಿ ಬಗ್ಗೆ ಕಾಳಜಿ ವಹಿಸುವ ಕೆಲಸವಾಗಬೇಕು. ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತರು ಗುಣಮುಖರಾಗಿ ಹೊರಗೆ ಬರುವಂತಾಗಬೇಕು ಎಂದರು. ಅಲ್ಲದೆ ಆಶಾ ಕಾರ್ಯಕರ್ತೆಯರು ಸರ್ವೆ ಮಾಡಿ ಆರೋಗ್ಯ ವಿಚಾರಿಸುತ್ತಿರುವ ಕಾರ್ಯವನ್ನು ಉಪ ಮುಖ್ಯಂತ್ರಿಗಳು ಶ್ಲಾಘಿಸಿದರು. ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು ಆರು ಪಾಸಿಟಿವ್ ಸೋಂಕಿತರು ಗುಣಮುಖರಾಗಿದ್ದಾರೆ. ಐದು ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ ಒಬ್ಬರ ವರದಿ ಬರಬೇಕಿದೆ. ನಾಳೆ ವರದಿ ಬಂದ ಬಳಿಕ ಆರೂ ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡುತ್ತೇವೆ ಎಂದರು.