ಬಾಗಲಕೋಟೆ: ಇಡೀ ರಾಜ್ಯದಲ್ಲಿ ಅಪರಾಧ ಚಟುವಟಿಕೆ ತಡೆಯುವ ದೃಷ್ಟಿಯಿಂದ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಯೋಜನೆಯನ್ನು ಜಾರಿಗೊಳಿಸಿದ್ದು, ಬೆಂಗಳೂರಿನಲ್ಲೇ ಸುಮಾರು 121 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಸಿಟಿಟಿ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಪ್ರವಾಸದ ವೇಳೆ ನವನಗರದ ಎಸ್ಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅವಳಡಿಕೆ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಾಗಲಕೋಟೆ ಜಿಲ್ಲೆಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆ ತಡೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಔರಾದ್ಕರ್ ವರದಿ: ಔರಾದ್ಕರ್ ವರದಿ ಹೊಸಬರಿಗೆ ಮಾತ್ರ ಅನ್ವಯ ಆಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಔರಾದ್ಕರ್ ವರದಿಯನ್ನು ಮತ್ತೆ ಮರುಪರಿಶೀಲನೆ ಮಾಡಬೇಕು ಎಂದು ಚಿಂತನೆ ನಡೆಸಲಾಗಿದೆ. ಔರಾದ್ಕರ್ ವರದಿಯ ಶಿಫಾರಸಿನಂತೆ ಹೊಸ ಕಾನೂನುಗಳನ್ನು ಜಾರಿಗೆ ತಂದಿದ್ದು, ಮುಂದೆ ಬರುವಂತವರಿಗೆ ಅವಕಾಶ ಸಿಗುತ್ತೆ ಆದರೆ, ಹಿಂದಿನವರಿಗೆ ಆಗಲ್ಲ. ಇನ್ನೊಂದಿಷ್ಟು ವೇತನಕ್ಕೆ ಸಂಬಂಧಿಸಿದಂತೆ ಹಣಕಾಸು ಹೆಚ್ಚು ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ನೋಡೋಣ ಎಂದರು.
ಪೊಲೀಸರಿಗೆ ವಸತಿ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯ ಒದಗಿಸಲು ಸರ್ಕಾರ ಸಿದ್ಧವಾಗಿದೆ ಎಂದು ಭರವಸೆ ನೀಡಿದರು. ಕೇಂದ್ರ ಸರ್ಕಾರದ ಯೋಜನೆಗಳಿಗೆ ರಾಜ್ಯ ಸರ್ಕಾರ ಲೇಬಲ್ ಹಚ್ಚಿಕೊಳುತ್ತದೆ ಎಂಬ ಪ್ರಶ್ನೆಗೆ ನಾವೆಲ್ಲಾ ಇರುವುದು ಒಕ್ಕೂಟ ವ್ಯವಸ್ಥೆಯಲ್ಲಿ, ಕೇಂದ್ರದ ಒಂದು ಭಾಗ ಇದ್ದರೆ ರಾಜ್ಯಕ್ಕೆ ಒಂದಿರುತ್ತೆ. ಅವರು ಮಾಡುವ ಕೆಲಸವೇ ಬೇರೆ, ನಾವು ಮಾಡುವ ಕೆಲಸ ಬೇರೆ, 60 - 40 ಪ್ರತಿಶತದಲ್ಲಿ ಕೇಂದ್ರ ಹಣ ಒದಗಿಸುತ್ತದೆ. ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡಿದ್ರೆ ಒಳ್ಳೆಯದು ಎಂದು ತಿಳಿಸಿದರು.
ನಂತರ ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಬಳಿಕ ನವನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಗೃಹ ಸಚಿವ ಡಾ ಜಿ ಪರಮೇಶ್ವರ ಭೇಟಿ ನೀಡಿದರು. ಇದಕ್ಕೂ ಮುನ್ನ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಇರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮಿಸಿದರು.
ನಂತರ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಅಜಯಕುಮಾರ್ ಸರನಾಯಕ, ಶಾಸಕ ಜೆ.ಟಿ.ಪಾಟೀಲ್ ಅವರಿಂದ ಗೌರವ ಸನ್ಮಾನ ಸ್ವೀಕರಿಸಿದರು. ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಎಚ್.ವೈ.ಮೇಟಿ, ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
ಇದನ್ನು ಓದಿ: ವಿಪಕ್ಷದವರ ಇಲ್ಲ ಸಲ್ಲದ ಹೇಳಿಕೆಗಳಿಗೆ ಉತ್ತರ ಕೊಡಲು ಆಗಲ್ಲ: ಗೃಹ ಸಚಿವ ಜಿ ಪರಮೇಶ್ವರ್