ಬಾಗಲಕೋಟೆ: ಜಿಲ್ಲಾ ಪಂಚಾಯತ್ ನೂತನ ಸಭಾಂಗಣದ ಉದ್ಘಾಟನೆ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮೇಲೆ ಅಸಮಾಧಾನಗೊಂಡು, ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಸುಮಾರು 4 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸಭಾಂಗಣದ ಬಗ್ಗೆ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಸರಿಯಾದ ಮಾನ್ಯತೆ ನೀಡುತ್ತಿಲ್ಲ ಎಂದು ಸಮಾರಂಭದಲ್ಲಿ ಭಾಗವಹಿಸದೆ ಕೆಲ ಸಮಯ ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದರು.
ನೂತನ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಸುವ ಉದ್ದೇಶ ಹೊಂದಿದ್ದರು. ಆದರೆ ಇದಕ್ಕೆ ಅವಕಾಶ ಕೊಡದೆ, ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸಭಾಂಗಣವನ್ನು ಉದ್ಘಾಟಿಸಿ, ಕೆಡಿಪಿ ಸಭೆ ನಡೆಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಿಳಾ ಸದಸ್ಯರು ಬೇಸರಗೊಂಡರು. ಈ ಸಮಯದಲ್ಲಿ ಬಿಜೆಪಿ ಪಕ್ಷದ ಸದಸ್ಯರಾದ ಹೂವಪ್ಪ ರಾಠೋಡ ಹಾಗೂ ಶಶಿಕಾಂತ ಪಾಟೀಲ ಅವರು ಬಂದು ವೇದಿಕೆ ಆಗಮಿಸುವಂತೆ ಮನವಿ ಮಾಡಿಕೊಂಡಾಗ ಮಾತಿನ ಚಕಮಕಿ ನಡೆಯಿತು. ನಂತರ ಅಸಮಾಧಾನಿತ ಸದಸ್ಯರ ಮನ ಓಲೈಸಿ ಕರೆದುಕೊಂಡು ಬಂದರು.
ವೇದಿಕೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ಉಸ್ತುವಾರಿ ಸಚಿವರು ಅಧಿಕಾರಿಗಳ ಸಮ್ಮುಖದಲ್ಲಿ ಜ್ಯೋತಿ ಬೆಳಗಿಸಿದ್ರು. ನಂತರ ಎಲ್ಲಾ ಸದಸ್ಯರನ್ನು ವೇದಿಕೆ ಕರೆದು ಸಮಾರಂಭಕ್ಕೆ ಚಾಲನೆ ನೀಡಿ ಸಮಾಧಾನ ಮಾಡಲಾಯ್ತು. ಭವ್ಯವಾದ ಸಭಾ ಭವನ ನಿರ್ಮಾಣಕ್ಕೆ ಕಾರಣವಾಗಿರುವ ಜಿಪಂ ಎಲ್ಲಾ ಸದಸ್ಯರನ್ನು ಸನ್ಮಾನಿಸುವ ಮೂಲಕ ಅಭಿನಂದನೆ ಸಲ್ಲಿಸಲಾಯಿತು.
ಇದನ್ನೂ ಓದಿ: ಜೂನ್ನಲ್ಲಿ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಗಾಂಧಿಯೇತರರಿಗೆ ಒಲಿಯಲಿದೆಯಾ ಪಟ್ಟ?