ಬಾಗಲಕೋಟೆ: ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳು ಕುರಿತು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಹಾಗು ಅಂಗನವಾಡಿ ಕಾರ್ಯಕರ್ತೆಯರಿಗೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಗ್ರಾಮೀಣ ಭಾಗದಲ್ಲಿ ಕೋವಿಡ್ ನಿಯಂತ್ರಣದಲ್ಲಿ ತೊಡಗಿದ್ದ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದರು.
ಮುಂದುವರಿದು ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ 60 ವರ್ಷ ಮೇಲ್ಪಟ್ಟವರು, ಗರ್ಭಿಣಿಯರು, ಬಾಣಂತಿಯರ ಸಮೀಕ್ಷೆ ಮಾಡಿ ವರದಿ ಸಲ್ಲಿಸಿದ್ದೀರಿ. ಗ್ರಾಮೀಣ ಭಾಗದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚು ಹೆಚ್ಚು ಕಂಡುಬರುತ್ತಿದೆ. ಹಾಗಾಗಿ ಜನರಲ್ಲಿ ಕೋವಿಡ್ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸೋಪಿನಿಂದ ಕೈಗಳನ್ನು ತೊಳೆದುಕೊಳ್ಳುವ ಕುರಿತು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸುರಕ್ಷಿತ ಕ್ರಮಗಳನ್ನು ಕೈಗೊಂಡು ಅರಿವು ಮೂಡಿಸಬೇಕು ಎಂದರು.
ಗ್ರಾಮಗಳಿಗೆ ಬೇರೆ ರಾಜ್ಯ, ಜಿಲ್ಲೆಗಳಿಂದ ಆಗಮಿಸುವವರ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಅಂತವರು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವ ಕೆಲಸ ಮಾಡಿ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಗುರುಸಿದ್ದಯ್ಯ ಹಿರೇಮಠ ಉಪಸ್ಥಿತರಿದ್ದರು.