ಬಾಗಲಕೋಟೆ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರ ನೇತೃತ್ವದಲ್ಲಿ ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಯಿತು.
ನೆರೆ ಪ್ರದೇಶದಲ್ಲಿ ಮನೆ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಮನೆ ನಿರ್ಮಾಣ ಮಾಡುವ ಸಲುವಾಗಿ ಸಿಇಓ ಹಾಗೂ ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಪಿಡಿಓ ಹಾಗೂ ಕೆಳ ಮಟ್ಟದ ಅಧಿಕಾರಿಗಳು ಅವ್ಯವಹಾರ ಮಾಡಿರುವ ಬಗ್ಗೆ ಮಾಹಿತಿ ಇದೆ. ಅದನ್ನು ಸರಿಯಾಗಿ ನಿಭಾಯಿಸಿ, ಇಲ್ಲವೇ ನೀವೇ ಹೊಣೆಯಾಗುತ್ತಿರಿ ಎಂಬ ಎಚ್ಚರಿಕೆ ನೀಡಿದರು.
ಈ ಸಮಯದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ, ಈಗಾಗಲೇ ನೆರೆ ಸಂತ್ರಸ್ತರ ಸೌಲಭ್ಯಕ್ಕಾಗಿ ಸರ್ಕಾರ 200 ಕೋಟಿಗೂ ಅಧಿಕ ಹಣ ಬಿಡುಗಡೆ ಮಾಡಲಾಗಿದ್ದು, ಸಂತ್ರಸ್ತರ ಹಿತ ಕಾಪಾಡುವುದಕ್ಕೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.
ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವ ವಿ. ಸೋಮಣ್ಣ ಮಾತನಾಡಿ, ಕೊಡಗಿನಲ್ಲಿ ಶ್ರೀಕಂಠಯ್ಯ ಎಂಬ ಅಧಿಕಾರಿ ಸರ್ಕಾರದ ಹಣವನ್ನ ತನ್ನ ವೈಯಕ್ತಿಕ ಖಾತೆಯಲ್ಲಿ ಜಮಾ ಮಾಡಿಕೊಂಡಿರುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾಹಿತಿ ತೆಗೆದುಕೊಳ್ಳುತ್ತೇನೆ. ಬಳಿಕ ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದು, ಅನಿವಾರ್ಯವಾದಲ್ಲಿ ಅಮಾನತು ಮಾಡುವಂತೆ ಸೂಚನೆ ನೀಡಲಾಗಿದೆ ಎಂದರು.