ಬಾಗಲಕೋಟೆ: ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಭಾರತೀಯ ಕಿಸಾನ್ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕಾಳಿದಾಸ ಹೈಸ್ಕೂಲ್ ಮೈದಾನದಲ್ಲಿ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನ ನಡೆಸಲಾಯಿತು.
ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್, ರೈತ ಸಂಘಟನೆ ಮುಖಂಡರು, ಕರವೇ ಸಂಘಟನೆ ಮುಖಂಡರ ನೇತೃತ್ವದಲ್ಲಿ ಐವರು ಮಹಿಳೆಯರು ಸಸಿಗೆ ನೀರು ಹಾಕುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ಆರ್.ಪಾಟೀಲ್ ಮಾತನಾಡಿ, ನೆರೆ ಸಂತ್ರಸ್ತರಿಗೆ ಸರ್ಕಾರ ಸರಿಯಾದ ಸೌಲಭ್ಯ ನೀಡುತ್ತಿಲ್ಲ. ಒಂದು ಲಕ್ಷ ಕೋಟಿ ರೂ. ಹಾನಿ ಸಂಭವಿಸಿದ್ದರೂ ಪ್ರಧಾನಮಂತ್ರಿ ಮೋದಿ ಅವರಿಗೆ ಹೆಚ್ಚಿನ ಪರಿಹಾರ ಧನ ನೀಡುವಂತೆ ಕೇಳಲು ಧೈರ್ಯ ಇಲ್ಲ. ಇಂತಹ ಕೆಟ್ಟ ಸರ್ಕಾರ ಜೀವಮಾನದಲ್ಲಿಯೇ ಕಂಡಿಲ್ಲ ಎಂದು ಕಿಡಿಕಾರಿದರು.
ಇದೇ ಸಂದರ್ಭ 12 ಹಕ್ಕೊತ್ತಾಯ ಮಂಡನೆ ಮಾಡಲಾಯ್ತು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯ್ತು. ಸರ್ಕಾರ ಬೇಡಿಕೆ ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ರೈತರನ್ನು ಕರೆದುಕೊಂಡು ಹೋಗಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಈಟಿವಿ ಭಾರತ್ಗೆ ತಿಳಿಸಿದರು.