ಬಾಗಲಕೋಟೆ: ಜಿಲ್ಲೆಯ ಮುಧೋಳ ಹಾಗೂ ಜಮಖಂಡಿ ತಾಲೂಕಿನ ನೆರೆ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಸಂತ್ರಸ್ತರ ಅಳಲು ಆಲಿಸಿದರು. ಚಿಚಖಂಡಿ, ಯಾದವಾಡ ಸೇತುವೆ ಸೇರಿದಂತೆ ಇತರ ಗ್ರಾಮಗಳಿಗೆ ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಪ್ರವಾಹ ಉಂಟಾಗಿರುವ ಪ್ರದೇಶದಲ್ಲಿ ಸಂಚರಿಸಿ ಪರಿಶೀಲಿಸುತ್ತೇನೆ. ನಂತರ ಮುಖ್ಯಮಂತ್ರಿಗೆ ಈ ಬಗ್ಗೆ ವರದಿ ನೀಡಿ ಕೇಂದ್ರದಿಂದ ಹೆಚ್ಚಿನ ನೆರವು ನೀಡುವಂತೆ ಒತ್ತಾಯ ಮಾಡುತ್ತೇನೆ ಎಂದರು.
ಪ್ರವಾಹಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ವಿಶೇಷ ಅಧಿವೇಶನ ಕರೆಯುವಂತೆ ಒತ್ತಾಯಿಸುತ್ತೇನೆ. ಈ ಅಧಿವೇಶನದಲ್ಲಿ ಪ್ರವಾಹ, ಪರಿಹಾರ ಸೇರಿದಂತೆ ಇತರ ವಿಷಯಗಳ ಚರ್ಚಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ನಾನು ಯಾವ ಅಧ್ಯಕ್ಷ ಸ್ಥಾನಕ್ಕೂ ಇಲ್ಲ. ಯಾವ ವಿರೋಧ ಪಕ್ಷದ ನಾಯಕ ಸ್ಥಾನದ ಆಕಾಂಕ್ಷೆಯೂ ಅಲ್ಲ. ಎಲ್ಲಿಯೂ ಈ ಬಗ್ಗೆ ಮಾತನಾಡಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.