ಬಾಗಲಕೋಟೆ : ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಬರ ಪರಿಸ್ಥಿತಿಯಿದ್ದು, ನಿರ್ವಹಣೆಗೆ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು 730 ಕೊಟಿ ರೂ. ಅನುದಾನವಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಬಾದಾಮಿ ತಾಲೂಕಿನ ಹವಳಕೋಡ ಮತ್ತು ತೆಗ್ಗಿ ಗ್ರಾಮದಲ್ಲಿ ಬರ ಪರಿಹಾರದ ಕಾಮಗಾರಿಗಳನ್ನು ವಿಕ್ಷೀಸಿ ಬರ ನಿರ್ವಹಣೆಯ ಸಭೆಯ ಮುಂಚೆ ಪತ್ರಕರ್ತರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬರ ಪರಿಹಾರ ಕಾಮಗಾರಿಗಳಿಗೆ ಯಾವುದೇ ರೀತಿಯ ಅನುದಾನದ ಕೊರತೆಯಿಲ್ಲ. ಈಗಾಗಲೇ ಸುಮಾರು 730 ಕೋಟಿ ರೂ. 30 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜಂಟಿ ಖಾತೆಯಲ್ಲಿದೆ ಎಂದು ಮಾಹಿತಿ ನೀಡಿದರು.
ಜಾನುವಾರುಗಳಿಗೆ ನೀರಿನ, ಮೇವಿನ ಅಭಾವ ಆಗದಂತೆ ಜನರಿಗೆ ಉದ್ಯೋಗ ದೊರೆಯುವಂತೆ ಹಾಗೂ ಯಾರು ಗೂಳೆ ಹೊಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಬರ ಪೀಡಿತ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಖಾಸಗಿ ಕೊಳವೆ ಬಾವಿಗಳಿಂದಲೂ ಸಹ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ಕಳೆದ ಬಾರಿ ರಾಜ್ಯದಲ್ಲಿ 10.47 ಕೋಟಿ ಮಾನವ ದಿನಗಳನ್ನು ಉತ್ಪಾದಿಸಲಾಗಿದ್ದು, ಈ ಬಾರಿ 13 ಕೋಟಿ ಮಾನವ ದಿನಗಳನ್ನು ಉತ್ಪಾದಿಸುವ ಗುರಿ ಹೊಂದಿದೆ. ಪ್ರಸಕ್ತ ಸಾಲಿನಲ್ಲಿ 150 ದಿನಗಳ ಉದ್ಯೋಗ ನೀಡಲಾಗುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕಳೆದ 14 ವರ್ಷಗಳಿಂದ ಸತತ ಬರಗಾಲವಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರಕಾರ ಮುಂದಾಗಬೇಕು ಎಂದರು.
ನಂತರ ಬರ ಪರಿಸ್ಥಿತಿ ಹಾಗೂ ಕೈಗೊಂಡ ಕ್ರಮಗಳ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಜಾನುವಾರುಗಳಿಗೂ ಸಹ ನೀರು ಮತ್ತು ಮೇವಿನ ಕೊರತೆಯಾಗದಂತೆ ನೋಡಿಕೊಂಡು ರಕ್ಷಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.