ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಮೂರು ತಲುಪಿದೆ.
ಬಾಗಲಕೋಟೆ ನವನಗರದ 50 ವರ್ಷದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ. ಮೂರು ದಿನಗಳ ಹಿಂದೆ ಕೆಮ್ಮು, ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರ ಗಂಟಲುದ್ರವ ಮಾದರಿಯನ್ನು ನಿನ್ನೆ ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿತ್ತು.
ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಮೃತ ವ್ಯಕ್ತಿಯ ಸಮಗ್ರ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ವಾಸ ಮಾಡಿದ್ದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ.
ಈ ಮಧ್ಯೆ, ಎಸ್ಎಸ್ಎಲ್ಸಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ವಿದ್ಯಾರ್ಥಿಗಳು ಜಿಲ್ಲೆಯ ಕಲಾದಗಿ ಗ್ರಾಮದ ಪರೀಕ್ಷಾ ಕೇಂದ್ರದವರು ಎನ್ನಲಾಗಿದೆ. ಮೊದಲ ದಿನ ಪರೀಕ್ಷೆಗೆ ಹಾಜರಾಗಿದ್ದ ವೇಳೆ ಇವರಿಗೆ ಥರ್ಮಲ್ ಪರೀಕ್ಷೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ವೇಳೆ ಶೀತ, ನೆಗಡಿ, ಕೆಮ್ಮಿನ ಲಕ್ಷಣಗಳು ಗೋಚರಿಸಿವೆ. ಒಟ್ಟು ಏಳು ಜನ ವಿದ್ಯಾರ್ಥಿಗಳಲ್ಲಿ ಈ ರೀತಿಯ ಲಕ್ಷಣ ಕಾಣಿಸಿದ ಪರಿಣಾಮ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ಇವರ ಪೈಕಿ ಇಬ್ಬರಲ್ಲಿ ಪಾಸಿಟವ್ ಬಂದಿದ್ದು, ಉಳಿದ ವಿದ್ಯಾರ್ಥಿಗಳಲ್ಲಿ ನೆಗೆಟಿವ್ ಬಂದಿದೆ.
ಪಾಸಿಟಿವ್ ಬಂದಿರುವ ಇಬ್ಬರು ವಿದ್ಯಾರ್ಥಿಗಳಿಗೆ ನಾಳೆಯ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಮುಂಬರುವ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುತ್ತಿದ್ದು, ಅದನ್ನು ಪೂರಕ ಪರೀಕ್ಷೆ ಎನ್ನದೇ ಮೊದಲ ಪರೀಕ್ಷೆ ಎಂದೇ ಪರಿಗಣಿಸಲಾಗುತ್ತದೆ ಎಂದು ಡಿಡಿಪಿಐ ಶ್ರೀಶೈಲ ಬಿರಾದಾರ ತಿಳಿಸಿದರು.