ಬಾಗಲಕೋಟೆ: ಜಿಲ್ಲೆಯಲ್ಲಿ ಜೂನ್ 11ರಿಂದ 20ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಜವಾಬ್ದಾರಿ ವಹಿಸಿ, ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, 6758 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪರೀಕ್ಷೆ ಪ್ರಾರಂಭದಿಂದ ಮುಕ್ತಾಯದವರೆಗೆ ಸಿಸಿಟಿವಿ ಕ್ಯಾಮರಾಗಳು ಯಾವುದೇ ಕಾರಣಕ್ಕೂ ಬಂದ್ ಆಗದಂತೆ ನೋಡಿಕೊಳ್ಳಲು ತಿಳಿಸಿದರು.
ಶಿಸ್ತುಬದ್ಧವಾಗಿ, ಕಾನೂನಾತ್ಮಕವಾಗಿ ಹಾಗೂ ನಕಲು ರಹಿತವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ 2 ಜಾಗೃತ ದಳದ ತಂಡಗಳನ್ನು ನೇಮಿಸಲಾಗಿದ್ದು, ಈ ತಂಡವು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಕ್ರಮ ಚಟುವಟಿಕೆಗಳ ಮೇಲೆ ನಿಗಾವಹಿಸಲಿದ್ದಾರೆ. ಅಲ್ಲದೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿಸಲು 144 ಕಲಂ ಜಾರಿ ಮಾಡಲಾಗುತ್ತಿದೆ ಎಂದರು.