ಬಾಗಲಕೋಟೆ : ಕೊರೊನಾದಿಂದ ಮೃತಪಟ್ಟಿರುವ ಆರೋಗ್ಯ ಇಲಾಖೆ ಸಿಬ್ಬಂದಿಗೆ ಸರ್ಕಾರದಿಂದ ಈವರೆಗೂ ಪರಿಹಾರ ಧನ ಸಿಗದ ಹಿನ್ನೆಲೆ ಅವರ ಕುಟುಂಬಸ್ಥರು ಕಣ್ಣೀರಲ್ಲಿ ಕೈ ತೊಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ನಿವಾಸಿ ಪರಶುರಾಮ ಯಂಡಿಗೇರಿ ಎಂಬುವರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಹಾಯಕ ಸಿಬ್ಬಂದಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಣೆ ವೇಳೆ ಅಂದರೆ ಜೂನ್ 29ರಂದು ವೈರಸ್ ತಗುಲಿ ಮೃತಪಟ್ಟಿದ್ದರು. ಕರ್ತವ್ಯ ನಿರ್ವಹಿಸುವ ವೇಳೆ ಮೃತಪಟ್ಟರೆ ಪರಿಹಾರ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ಈವರೆಗೆ ಕುಟುಂಬಸ್ಥರಿಗೆ ಪರಿಹಾರ ಸಿಕ್ಕಿಲ್ಲ.
ಪರಶುರಾಮ ಅವರಿಗೆ ಮೂವರು ಮಕ್ಕಳಿದ್ದು, ಇಬ್ಬರು ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ತಂದೆಯನ್ನು ಕಳೆದುಕೊಂಡ ಮಕ್ಕಳು ಓದು ಮುಂದುವರಿಸುವುದಕ್ಕಾಗಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯನವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಅಂತಾರೆ ಮೃತರ ಪತ್ನಿ ಕಸ್ತೂರಿ ಬಾಯಿ.
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಂಡು ಪರಿಹಾರ ಕೊಡಬೇಕೆಂದು ಕುಟುಂಬಸ್ಥರು ಒತ್ತಾಯಿಸುತ್ತಿದ್ದಾರೆ.