ಬಾಗಲಕೋಟೆ: ತೇರದಾಳ ಮತ ಕ್ಷೇತ್ರಕ್ಕೆ ಶಾಸಕ ಸಿದ್ದು ಸವದಿ ಅಭ್ಯರ್ಥಿ ಎಂದು ಬಾಯಿ ತಪ್ಪಿ ಹೇಳಿದ್ದೇನೆ. ಪಕ್ಷದ ಚುನಾವಣಾ ಸಮಿತಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಿದೆ ಎಂದು ಸಂಸದೀಯ ಮಂಡಳಿ ಸದಸ್ಯ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಬಾಗಲಕೋಟೆ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವುದು ಕೇಂದ್ರದ ಚುನಾವಣೆ ಸಮಿತಿ. ನಾನು ಹೆಸರು ಹೇಳುವುದು ಸೂಕ್ತವಲ್ಲ. ಚುನಾವಣೆ ಸಮಿತಿ ತೀರ್ಮಾನ ತೆಗೆದುಕೊಳ್ಳುತ್ತದೆ. ಅಧಿಕಾರಕ್ಕೆ ಬಿಜೆಪಿ ಬರಲಿದೆ ಎಂದು ಪ್ರತಿ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಗೊಂದಲ ಮಾಡಿಕೊಳ್ಳದೆ ಎಲ್ಲರ ಜತೆ ಚರ್ಚಿಸಿ ಒಗ್ಗಟ್ಟಾಗಿ ಚುನಾವಣೆ ಎದುರಿಸಲಾಗುವುದು. 80 ವರ್ಷ ಆಗಿದ್ದರಿಂದ ಚುನಾವಣೆ ಸ್ಪರ್ಧೆ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದರು.
ಮಹೇಶ ಕುಮಠಳ್ಳಿಗೆ ಟಿಕೆಟ್ ನೀಡದಿದ್ದರೆ ನಾನೂ ಸ್ಪರ್ಧಿಸುವುದಿಲ್ಲ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸುತ್ತ, ಅವರ ಹೇಳಿಕೆ ಸೂಕ್ತ ಅಲ್ಲ ಎಂದರು. ಇನ್ನು ಸಚಿವ ವಿ ಸೋಮಣ್ಣ ದೆಹಲಿಗೆ ಬೇರೆ ಕೆಲಸದ ಮೇಲೆ ಹೋಗಿದ್ದಾರೆ. ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಅವರು ಆ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡ್ತಿದ್ದಾರೆ. ಅವರ ಬಗ್ಗೆ ಎಲ್ಲರಿಗೂ ಗೌರವ ಇದೆ. ಅವರ ಸಹಕಾರದಿಂದ ನಾವು ಅಧಿಕಾರಕ್ಕೆ ಬರುತ್ತೇವೆ. ವಿ. ಸೋಮಣ್ಣ ಪಕ್ಷ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿ ಪ್ರವಾಸ ಮಾಡಿದ್ದಷ್ಟು ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತೆ-ಬಿಎಸ್ವೈ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರವಾಸ ಮಾಡಿದಷ್ಟು ಬಿಜೆಪಿ ಹೆಚ್ಚು ಸೀಟು ಗೆಲ್ಲಲಿದೆ. ಯಾವ ಕಾಂಗ್ರೆಸ್ನವರು ಈ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಪ್ರಮುಖ ನಾಯಕರನ್ನು ಬಂಧಿಸಿದ್ದರೋ ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಎಸ್ವೈ ಪ್ರಶ್ನಿಸಿದರು.
ವಿಜಯ ಸಂಕಲ್ಪ ಯಾತ್ರೆಗೆ ನಿರೀಕ್ಷೆ ಮೀರಿ ಜನರು ಸ್ಪಂದಿಸುತ್ತಿದ್ದಾರೆ. ಜನರ ಸ್ಪಂದನೆ ನೋಡಿದ ಮೇಲೆ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಎದುರಿಸುವ ಶಕ್ತಿ ಕಾಂಗ್ರೆಸ್ನಲ್ಲಿ ಯಾರಿಗೂ ಇಲ್ಲ. ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿ ಆಗುವ ಕನಸು ನನಸಾಗುವುದಿಲ್ಲ ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ಬಳಿಕ ಜಿಲ್ಲೆಯ ಹುನಗುಂದ ಪ್ರವೇಶಿಸಿದ ಬಿಜೆಪಿಯ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‍್ಯಾಲಿ ನಡೆಸಿದರು.
ಇದನ್ನೂ ಓದಿ: ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ ಅಚಲ
ದೇಶದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಹೊರ ದೇಶದಲ್ಲಿ ಹೋಗಿ ಚಿಕ್ಕಮಕ್ಕಳಂತೆ ಹೇಳಿಕೆ ನೀಡಿ, ದೇಶದ ಅಪಮಾನ ಮಾಡುತ್ತಿದ್ದಾರೆ. ಈ ತರಹ ಹೇಳಿಕೆ ನೀಡುವುದು ಶೋಭೆ ತರವುದಿಲ್ಲ. ಈ ರೀತಿ ಹೇಳಿಕೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆಗತ್ತದೆಯೇ ಹೊರತು ನಮಗೆ ಅದರಿಂದ ಸಮಸ್ಯೆ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ - ಬನಹಟ್ಟಿ ಪಟ್ಟಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಭಾಗವಹಿಸಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಪಕ್ಷ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಮುಂಬರುವ ದಿನಮಾನದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹೊರ ದೇಶದಲ್ಲಿ ಚಿಕ್ಕಮಕ್ಕಳಂತೆ ದೇಶದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ: ಬಿಎಸ್ವೈ