ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿರುವ ಹಿನ್ನೆಲೆ ಖಾಲಿ ಕೊಡ ಹಿಡಿದು ಪಂಚಾಯತ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.
ಮಹಿಳೆಯರು, ಪುರುಷರು ಹಾಗೂ ಮಕ್ಕಳು ಖಾಲಿ ಕೊಡ ಪ್ರದರ್ಶನ ಮಾಡುವ ಮೂಲಕ ನೀರು ಒದಗಿಸಬೇಕು ಎಂದು ಘೋಷಣೆ ಕೂಗಿದರು. ಕೊಣ್ಣೂರ ಗ್ರಾಮದಲ್ಲಿ ಸತತ ಮೂರು ತಿಂಗಳ ಕಾಲ ಊರಿಗೆ ಸರಿಯಾಗಿ ನೀರಿನ ವ್ಯವಸ್ಥೆಯಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ಸಲ್ಲಿಸಿದರೆ ಉಡಾಫೆ ಉತ್ತರ ಕೊಡುತ್ತಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಿಂದ ಗ್ರಾಮೀಣ ಪ್ರದೇಶಗಳಿಗೆ ಸಾಕಷ್ಟು ಅನುದಾನ ಇದ್ದರೂ ಸರಿಯಾಗಿ ವಿನಿಯೋಗ ಮಾಡುತ್ತಿಲ್ಲ. ಯೋಜನೆಗಳ ಬಗ್ಗೆ ಮಾಹಿತಿ ಕೇಳಿದರೆ ಪಿಡಿಒ ಹಾಗೂ ಜನಪ್ರತಿನಿಧಿಗಳು ಉಡಾಫೆ ಉತ್ತರ ಕೊಡುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಎರಡು ದಿನದಲ್ಲಿ ಗ್ರಾಮದಲ್ಲಿ ಸರಿಯಾಗಿ ನೀರು ಒದಗಿಸಬೇಕು. ಇಲ್ಲವಾದರೆ ಗ್ರಾಮ ಪಂಚಾಯಿತಿ ಎದುರು ಉಪಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಈ ಬಗ್ಗೆ ಜಿಲ್ಲಾಡಳಿತ ಗಮನ ಹರಿಸಬೇಕು. ಇಲ್ಲವಾದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.