ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪುರಸಭೆಗೆ ಮೇ 29 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಹೆಬ್ಬಗೋಡಿ ನಗರ ಸಭೆಯ ವಾರ್ಡ್ ಸಂಖ್ಯೆ 26ರ ಸ್ಥಾನಕ್ಕೂ ಚುನಾವಣೆ ನಡೆಯಲಿದೆ.
ಚುನಾವಣಾ ವೇಳಾಪಟ್ಟಿ:
ಎಲ್ಲಾ ಕಾರ್ಯ ದಿನಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮ ಪತ್ರಗಳನ್ನು ಸಲ್ಲಿಸಬಹುದಾಗಿದೆ. ಅಂತೆಯೇ, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ. ಮೇ 17ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 20ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಅಂದು ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ.
ಮತದಾನ ಅವಶ್ಯವಿದ್ದಲ್ಲಿ, ಮೇ 29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಮೇ 30ರಂದು ನಡೆಸಲಾಗುವುದು. ಮೇ 31ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯ್ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.