ದೊಡ್ಡಬಳ್ಳಾಪುರ : ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಯುವಕನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದ ಸರ್ಕಾರಿ ಕಾಲೇಜು ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನು ಲಿಂಗನಹಳ್ಳಿ ಗ್ರಾಮದ ನಿವಾಸಿ ನಂದನ್ ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ನಂದನ್ ಕುಮಾರ್ ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.
ಬಿ.ಇ. ವ್ಯಾಸಂಗ ಮಾಡುತ್ತಿದ್ದ ನಂದನ್, ಬೆಳಗಿನ ಸಮಯದಲ್ಲಿ ಆನ್ಲೈನ್ ಮೂಲಕ ವ್ಯಾಸಂಗ ಮಾಡುತ್ತಾ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ಹೋಗಿ ಕುಟುಂಬಕ್ಕೆ ನೆರವಾಗುತ್ತಿದ್ದ ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.