ದೇವನಹಳ್ಳಿ: ಕೇಂದ್ರ ಬಿಜೆಪಿ ವರಿಷ್ಠರು ಮತ್ತು ಸಚಿವರನ್ನು ಭೇಟಿ ಮಾಡಲು ದೆಹಲಿ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ರಾತ್ರಿ 11 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ದೆಹಲಿ ಪ್ರವಾಸದಲ್ಲಿದ್ದ ಬೊಮ್ಮಾಯಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತಾರಾಜ್ಯ ಜಲ ವಿವಾದಗಳ ಕುರಿತು ನವದೆಹಲಿಯಲ್ಲಿ ಕಾನೂನು ಮತ್ತು ತಾಂತ್ರಿಕ ತಜ್ಞರ ಜೊತೆ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದರು. ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ರಚನೆ ಮಾಡಿರುವ ಉನ್ನತಾಧಿಕಾರ ಸಮಿತಿಯೊಂದಿಗೆ ಸಭೆ ನಡೆಸಿ, ರೈತರ ಆದಾಯ ದ್ವಿಗುಣದ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನಂತರ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಕಾರ್ಪೊರೇಟ್ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪೀಯುಷ್ ಗೋಯಲ್ ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ನಿನ್ನೆ ರಾತ್ರಿ 11 ಗಂಟೆಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಆದರು.