ದೇವನಹಳ್ಳಿ: ಲಾಕ್ಡೌನ್ನಿಂದ ಮಾಲ್ಡೀವ್ಸ್ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ತಾಯ್ನಾಡಿಗೆ ಕರೆ ತರಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 152 ಪ್ರಯಾಣಿಕರು ಆಗಮಿಸಿದ್ದಾರೆ. ಅದರಲ್ಲಿ ಇಬ್ಬರಿಗೆ ಕೊರೊನಾ ಲಕ್ಷಣಗಳು ಕಂಡ ಬಂದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆಸ್ಪತ್ರೆಗೆ ಕಳಿಸಲಾಗಿದೆ.
ಮಾಲ್ಡೀವ್ಸ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂಭತ್ತನೇ ಏರ್ ಇಂಡಿಯಾ ವಿಮಾನದಲ್ಲಿ ಒಟ್ಟು 152 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದು, ಇದರಲ್ಲಿ ಇಬ್ಬರು ಗರ್ಭಿಣಿಯರು, ಹತ್ತು ವರ್ಷದೊಳಗಿನ ಒಂದು ಮಗು ಸೇರಿದಂತೆ 132 ಪುರುಷರು ಮತ್ತು 20 ಮಹಿಳೆಯರಿದ್ದಾರೆ.
ಈ ವೇಳೆ ವೈದ್ಯರು ಹಾಗೂ ಸಿಬ್ಬಂದಿ ವಿಮಾನ ನಿಲ್ದಾಣಕ್ಕೆ ಬಂದಿಳಿದವರ ಆರೋಗ್ಯ ತಪಾಸಣೆಗೆ ಮುಂದಾಗಿದ್ದು, ಅದರಲ್ಲಿ ಇಬ್ಬರಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ಗಾಗಿ ಕಳುಹಿಸಿಕೊಡಲಾಗಿದೆ.
ಇನ್ನುಳಿದ 150 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್ಗಾಗಿ ಹೋಟೆಲ್ಗಳಿಗೆ ಕಳುಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.