ಹೊಸಕೋಟೆ (ಬೆಂಗಳೂರು ಗ್ರಾ): ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಹೊಸಕೋಟೆ ತಾಲೂಕಿನ ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಖಂಡಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಯನಗುಂಟೆ ಗ್ರಾಮದ ಮಧ್ಯ ಭಾಗದಲ್ಲಿ ನಿರ್ಮಾಣ ಮಾಡಿದ್ದ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ನಾಶ ಪಡಿಸಿದ್ದಾರೆ ಎಂದು ವರದಿಯಾಗಿದೆ. ಕಿಡಿಗೇಡಿಗಳ ಕೃತ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಹಾಗೂ ಸಂಘಟನೆಗಳ ಪ್ರಮುಖರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬಸವೇಶ್ವರ ಪುತ್ಥಳಿ ತೆರವು: ಫ್ಲೈಓವರ್ ನಿರ್ಮಾಣಕ್ಕೆ ರಾತ್ರೋರಾತ್ರಿ ಕಾರ್ಯಾಚರಣೆ
ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಡಿವೈಎಸ್ಪಿ ಪಾಟೀಲ್ "ಇದು ಸಮಾಜ ಒಡೆಯುವ ಪ್ರಯತ್ನ. ಆದರೆ, ನಮ್ಮ ದಲಿತ ಬಾಂಧವರು ನಮಗೆ ಸಹಕಾರ ನೀಡಿ. ಕಾನೂನು ಬದ್ಧವಾಗಿ ಹೋರಾಟ ಮಾಡಿ. ಈ ಸಂಬಂಧ ಕೂಡಲೇ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗುವುದು. ಬಂಧನ ಮಾತ್ರವಲ್ಲದೇ ಇದೊಂದು ಮಾದರಿ ಪ್ರಕರಣವಾಗಿ ಅವರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ" ಎಂದು ಭರವಸೆ ನೀಡಿದರು. ಭರವಸೆ ನೀಡಿದ ಬಳಿಕ ದಲಿತರ ಸಂಘಟನೆಗಳು ಪ್ರತಿಭಟನೆ ಹಿಂತೆಗೆದುಕೊಂಡಿವೆ.
ಇದನ್ನೂ ಓದಿ: ಅಂಬೇಡ್ಕರ್ ಪ್ರತಿಮೆ ತೆರವು : ಕತ್ತು ಕೊಯ್ದುಕೊಂಡ ಅಭಿಮಾನಿ