ನವದೆಹಲಿ: 2017ರ ಆಗಸ್ಟ್ ತಿಂಗಳಲ್ಲಿ ದೆಹಲಿಯ ಡಿಕೆ ಶಿವಕುಮಾರ್ ಆಪ್ತರ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ರೂ ಪತ್ತೆ ಪ್ರಕರಣ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ರಾತ್ರಿ ಬಂಧಿಸಿ, ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ನವದೆಹಲಿಯ ಆರ್ಎಂಎಲ್ ಆಸ್ಪತ್ರೆಗೆ ತಪಾಸಣೆಗಾಗಿ ಕರೆದುಕೊಂಡು ಹೋಗಿದ್ದ ವೇಳೆ ಬಿಪಿ, ಶುಗರ್ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿಯಿಡೀ ಆಸ್ಪತ್ರೆಯಲ್ಲಿ ಕಳೆದಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾವಹಿಸಿದೆ ಎಂದು ತಿಳಿದು ಬಂದಿದೆ. ಬಿಪಿ,ಶುಗರ್ ಏರಿಳಿತ ಸಹಜ ಸ್ಥಿತಿಗೆ ಬಂದ ಬಳಿಕ ಅವರನ್ನ ಅಧಿಕಾರಿಗಳ ವಶಕ್ಕೆ ನೀಡಲಾಗುವುದು ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ನಾಲ್ಕು ದಿನಗಳಿಂದ ನವದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದರು. ಆದರೆ, ವಿಚಾರಣೆಗೆ ಡಿಕೆಶಿ ಸರಿಯಾಗಿ ಸಹಕರಿಸಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ನಿನ್ನೆ ಅವರನ್ನು ಬಂಧಿಸಿದ್ದರು. ಇಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅಥವಾ ನ್ಯಾಯಾಧೀಶರ ಮನೆಯಲ್ಲಿ ಹಾಜರುಪಡಿಸುವ ಸಾಧ್ಯತೆ ಇದ್ದು, ಡಿಕೆಶಿ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.