ದೇವನಹಳ್ಳಿ: ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವು ಕುಡಿಯುವ ನೀರಿನ ಘಟಕಗಳು ಶಿಥಿಲಗೊಂಡಿದ್ದು, ಶೀಘ್ರವಾಗಿ ದುರಸ್ತಿಗೊಳಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಮ್ಮ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಿನ್ನೆ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಘಟಕಗಳನ್ನು ಆದಷ್ಟು ಬೇಗ ದುರಸ್ತಿಗೊಳಿಸಬೇಕು. ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ಅಗತ್ಯ ಸೌಲಭ್ಯಗಳು ಸೋಂಕಿತರಿಗೆ ದೊರೆಯಬೇಕು. ತಾಲೂಕು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದರು.
ಚಿರತೆ ಹಿಡಿಯಲು ಆದೇಶ
ಇನ್ನು ಹೊಸಕೋಟೆಯ ನರಸಾಪುರ, ನೆಲಮಂಗಲ ತಾಲೂಕಿನ ಮಾಗಡಿ ಸೇರಿದಂತೆ ಗಡಿಭಾಗದ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಜನರು ಆಂತಕದಲ್ಲಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಜೊತೆಗೆ ಚಿರತೆ ದಾಳಿ ಮಾಡಿರುವ ಹಸು, ಕುರಿ, ಮೇಕೆಯ ವಾರಸುದಾರರಿಗೆ ಶೀಘ್ರವಾಗಿ ಪರಿಹಾರ ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪ ಕಾರ್ಯದರ್ಶಿ ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.