ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯವಸ್ಥೆ, ರಸ್ತೆ ಸಂಪರ್ಕ, ಸಾರಿಗೆ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಠಾಣೆ, ಕುಡಿಯುವ ನೀರಿನ ವ್ಯವಸ್ಥೆ, ವಸತಿ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚಿನ ಒತ್ತು ನೀಡುವುದರೊಂದಿಗೆ ಸ್ಥಳೀಯ ಸಂಸ್ಥೆಗಳಿಗೆ ನಿರ್ವಹಣಾ ಜವಾಬ್ದಾರಿಯನ್ನು ನೀಡಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ದಾಬಸ್‍ಪೇಟೆ ಕೈಗಾರಿಕಾ ಪ್ರದೇಶ ಹಾಗೂ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಕೈಗಾರಿಕಾ ಸಂಘದ ಪದಾಧಿಕಾರಿಗಳೊಡನೆ ಸಭೆ ನಡೆಸಿ ಅವರು ಮಾತನಾಡಿದರು.
ನೀರಿನ ಸಮಸ್ಯೆ ನೀಗಿಸಲು ಪ್ರತಿಯೊಂದು ಕೈಗಾರಿಕಾ ಕಟ್ಟಡಗಳಲ್ಲೂ ಕಡ್ಡಾಯವಾಗಿ ಮಳೆನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳಬೇಕು. ಮಳೆ ನೀರು ಸಂಗ್ರಹ ವ್ಯವಸ್ಥೆ ಕಲ್ಪಿಸಿಕೊಳ್ಳದ ಕೈಗಾರಿಕೆಗಳಿಗೆ ನೋಟಿಸ್ ನೀಡಲಾಗುವುದು ಎಂದ ಅವರು, ಈ ಕುರಿತು ಕೈಗಾರಿಕಾಧಿಕಾರಿಗಳು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡುವುದರೊಂದಿಗೆ ಕಾರ್ಮಿಕರಿಗಿರುವ ಸೌಲಭ್ಯಗಳನ್ನು ಪೂರ್ಣವಾಗಿ ಕಲ್ಪಿಸಿಕೊಡಬೇಕೆಂದರಲ್ಲದೆ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗವಕಾಶಗಳನ್ನು ನೀಡಬೇಕೆಂದು ಸೂಚಿಸಿದರು.
ದೊಡ್ಡಬಳ್ಳಾಪುರ ಕೈಗಾರಿಕೋದ್ಯಮಿಗಳ ಸಂಘದಿಂದ ಸ್ಥಳೀಯ ವಿದ್ಯಾವಂತ ಯುವಕರಿಗೆ ಕೌಶಲ್ಯ ತರಬೇತಿ ನೀಡಲು ಸ್ಥಳಾವಕಾಶ ಕಲ್ಪಿಸಲಾಗುವುದು ಹಾಗೂ ಕೌಶಲ್ಯ ತರಬೇತಿ ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವುದು ಸಚಿವರು ಹೇಳಿದರು.