ದೇವನಹಳ್ಳಿ: ಜಿಲ್ಲೆಯಲ್ಲಿ ಅನಧಿಕೃತ, ಕಾನೂನು ಬಾಹಿರ, ಅವೈಜ್ಞಾನಿಕ ಗಣಿಗಾರಿಕೆ ಮತ್ತು ಕಲ್ಲು ಪುಡಿ ಮಾಡುವ ಕೆಲಸ ನಡೆಯದಂತೆ ಎಚ್ಚರಿಕೆ ವಹಿಸುವಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ (ಗಣಿ) ಸಮಿತಿ ಮತ್ತು ಜಿಲ್ಲಾ ಕಲ್ಲುಪುಡಿ ಘಟಕಗಳ ಲೈಸೆನ್ಸಿಂಗ್ ಮತ್ತು ನಿಯಂತ್ರಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲ್ಲುಪುಡಿ ಮಾಡುವವರು ಸರ್ಕಾರದಿಂದ ಲೈಸೆನ್ಸ್ ಪಡೆದು, ಪರಿಣಿತಿ ಹೊಂದಿರುವ ಜೊತೆಗೆ ತಂತ್ರಜ್ಞಾನದ ಬಗ್ಗೆ ಅರಿವಿರಬೇಕು. ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಕ್ವಾರಿ ಮತ್ತು ಬ್ಲಾಸ್ಟಿಂಗ್ ಚಟುವಟಿಕೆಗಳು ಸಂಪೂರ್ಣವಾಗಿ ನಿಲ್ಲಬೇಕು, ಈ ಸಂಬಂಧ ತಾಲ್ಲೂಕು ಮಟ್ಟದಲ್ಲಿ ಒಂದು ಸಮಿತಿ ರಚಿಸಿ, ನಿಯಮಗಳ ಪಾಲನೆ ಕುರಿತು ಪರಿಶೀಲಿಸಬೇಕು ಎಂದರು.
ಸ್ಪೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಯಾವ ಸ್ಥಳದಿಂದ ಯಾವ ಸ್ಥಳಕ್ಕೆ ಸಾಗಾಣಿಕೆ ಮತ್ತು ಎಷ್ಟು ಪ್ರಮಾಣದಲ್ಲಿ ಸ್ಪೋಟಕ ವಸ್ತುಗಳನ್ನು ಶೇಖರಿಸಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟವರು ಸ್ಥಳೀಯ ಪೋಲಿಸ್ ಠಾಣೆಗೆ ಮಾಹಿತಿ ನೀಡಿರಬೇಕು ಎಂದು ತಿಳಿಸಿದರು.
ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಮಾತನಾಡಿ, ಜನರ ಜೀವದ ಕುರಿತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಳ್ಳದೆ ಕ್ವಾರಿ ನಡೆಸುವುದರಿಂದ ಅನಾಹುತ ಹೆಚ್ಚಾಗುತ್ತಿದೆ. ಬೆಳೆ ನಾಶ ಹಾಗೂ ರಾತ್ರಿ ವೇಳೆ ಅಕ್ರಮ ಕ್ವಾರಿ ಬ್ಲಾಸ್ಟ್ ಮಾಡುತ್ತಿರುವ ಬಗ್ಗೆ ಹಲವು ದೂರುಗಳು ಬಂದಿದ್ದು, ಅಂತವರ ವಿರುದ್ಧ ಶೀಘ್ರ ಕ್ರಮ ಜರುಗಿಸಲಾಗುವುದು ಎಂದರು.