ನೆಲಮಂಗಲ (ಬೆಂಗಳೂರು ಗ್ರಾಮಾಂತರ) : ಅಂತರರಾಷ್ಟ್ರೀಯ ಮಹಿಳಾ ಕಬಡ್ಡಿ ಆಟಗಾರ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ನಡೆದಿದೆ. ಧನಲಕ್ಷ್ಮೀ (25) ಮೃತಪಟ್ಟವರು.
ಎರಡು ದಿನಗಳ ಹಿಂದೆ ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ಸಹೋದರ ಮನೆಯಲ್ಲಿದ್ದ ಸಂದರ್ಭದಲ್ಲಿ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಸಮಯವಾದರೂ ಮಗಳು ಕೊಠಡಿಯಿಂದ ಹೊರಬಾರದೇ ಇದ್ದುದರಿಂದ ಅನುಮಾನಗೊಂಡ ತಂದೆ, ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಧನಲಕ್ಷ್ಮೀ ಕುಟುಂಬ ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆ.ತಿಮ್ಮಲಾಪುರದವರು. ಐದು ವರ್ಷದಿಂದ ನೆಲಮಂಗಲದ ಅರಿಶಿನಕುಂಟೆಯ ಆದರ್ಶನಗರದಲ್ಲಿ ಬಾಡಿಗೆಗೆ ಮನೆ ಮಾಡಿಕೊಂಡು ವಾಸವಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಬೆಂಗಳೂರಿನ ಕಾಡುಗೋಡಿಯ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾವುದೋ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ರಾಯಚೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ.. ಸಹೋದರನಿಂದ ಆತ್ಮಹತ್ಯೆ ಪ್ರಕರಣ ದಾಖಲು