ದೇವನಹಳ್ಳಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿದ್ದ ಕೆ. ಶ್ರೀನಿವಾಸ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನೂತನ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ ಅವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಅಧಿಕಾರ ಹಸ್ತಾಂತರಿಸಿದರು.
ನೂತನ ಜಿಲ್ಲಾಧಿಕಾರಿಗೆ ಸ್ವಾಗತ ಕೋರಿ ನಿರ್ಗಮಿತ ಜಿಲ್ಲಾಧಿಕಾರಿ ಕುರಿತು ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ ಅವರು, ಪಿ.ಎನ್.ರವೀಂದ್ರ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯಲ್ಲಿ ಸರ್ಕಾರದ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಶ್ರಮಿಸಿದ್ದಾರೆ. ಸ್ವತಃ ಕೋವಿಡ್-19 ಸೋಂಕಿಗೆ ತುತ್ತಾದರೂ ಕೂಡ, ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ನಿಯಂತ್ರಣಕ್ಕೆ ತರುವಲ್ಲಿ ಜಿಲ್ಲಾಧಿಕಾರಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ತಿಳಿಸಿದರು.
ಓದಿ: ಪರಿಸರವಾದಿ ದಿಶಾ ರವಿ ಬಿಡುಗಡೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ
ಕಚೇರಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ನಿರ್ಗಮಿತ ಜಿಲ್ಲಾಧಿಕಾರಿಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿದ್ದು, ಅವರ ಮುಂದಿನ ಸಾರ್ವಜನಿಕ ಜೀವನ ಉತ್ತಮವಾಗಿರಲಿ ಎಂದು ಆಶಿಸಿದರು. ತಹಶೀಲ್ದಾರ್ಗಳು, ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕರಾದ ರಾಜೀವಲೋಚನ, ಆರ್. ಹೆಚ್.ಎಂ.ಗಂಗಾಧರಪ್ಪ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.