ದೊಡ್ಡಬಳ್ಳಾಪುರ: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಆಯಾ ಶಾಲೆಗಳಲ್ಲಿ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕ್ಷೇತ್ರ ಶಿಕ್ಷಣಾಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಾಲೂಕಿನ ಖಾಸಗಿ ಶಾಲೆಗಳಲ್ಲಿ ಆರಂಭಿಸಿರುವ ಆನ್‌ಲೈನ್ ಶಿಕ್ಷಣವನ್ನು ಪೂರ್ಣ ರದ್ದು ಮಾಡಬೇಕು. ಶಾಲೆಗಳ ಶುಲ್ಕದಲ್ಲಿ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿದರು. ಕೊರೊನಾ ಸೋಂಕು ದೇಶದಾದ್ಯಂತ ಹರಡುತ್ತಿದ್ದು, ಇದೇ ವೇಳೆ ಜೂ. 25ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಿಸಲು ತಿರ್ಮಾನಿಸಲಾಗಿದೆ. ತಾಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷೆ ಬರೆಯಲು ದೂರದ ಗ್ರಾಮಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಹಾಗಾಗಿ ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಇನ್ನು ಲಾಕ್ ಡೌನ್ನಿಂದ ಕೆಲಸವಿಲ್ಲದೆ ಪೋಷಕರು ತಮ್ಮ ಮಕ್ಕಳಿಗೆ ಶಾಲಾ ಶುಲ್ಕ ಕಟ್ಟಲು ಪರದಾಡುವಂತಾಗಿದೆ. ಈ ಸಮಯದಲ್ಲಿ ಕೆಲವು ಶಾಲೆಗಳು ಆನ್‌ಲೈನ್ ಶಿಕ್ಷಣದ ನೆಪದಲ್ಲಿ ಪೋಷಕರಿಂದ ಹಣ ವಸೂಲಿ ಮಾಡುತ್ತಿವೆ. ಸರ್ಕಾರ 1ರಿಂದ 7ರವರೆಗೆ ಆನ್‌ಲೈನ್ ಶಿಕ್ಷಣ ರದ್ದು ಮಾಡಿರುವುದು ಸ್ವಾಗತಾರ್ಹ. ಇದನ್ನು 10ನೇ ತರಗತಿಯವರೆಗೂ ವಿಸ್ತರಿಸಬೇಕು. ಶಾಲಾ ಶುಲ್ಕದಲ್ಲಿ ಶೇ.25ರಷ್ಟು ರಿಯಾಯಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.